ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ 21866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕೊನೆಯ 23ನೇ ಸುತ್ತಿನಲ್ಲಿ 21866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಒಟ್ಟು 97941 ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 76075 ಮತಗಳನ್ನು ಪಡೆಯುವ ಮೂಲಕ ಸೋತಿದ್ದಾರೆ.
ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಮೇಶ್ ಮೇಟಿ ಪರ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ. ಕೈಯಲ್ಲಿ ಪಕ್ಷದ ಬಾವುಟಗಳು, ನಾಯಕರ ಫೋಟೋಗಳನ್ನು ಹಿಡಿದು ಜಯಘೋಷ ಕೂಗುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಕಾಂಗ್ರೆಸ್ ಅಭ್ಯರ್ಥಿ ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದರು. ಕೊನೆಗೂ ಜಯಭೇರಿ ಸಾಧಿಸಿದ್ದಾರೆ.
ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದು, ಏಪ್ರಿಲ್ 9ರಂದು ಮತದಾನ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಹಾಗೂ ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದರು.




