ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದ ರಾಧವ್ವ ಗಂಡ ಸದಾಶಿವ ಕಾಂಬಳೆ ಅವರಿಗೆ ಸೇರಿದ ಜಗದಾಳ ಗ್ರಾಮದ ಹದ್ದಿಯಲ್ಲಿರುವ ಒಂದು ಎಕರೆ ಪಿತ್ರಾರ್ಜಿತ ಜಮೀನಿನಲ್ಲಿ ಬೆಳೆದಿದ್ದ ಕಬ್ಬು, ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಹಾನಿಗೊಳಿಸಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬಾಗಲಕೋಟೆ ಜಿಲ್ಲಾ ಸಮಿತಿ (ಸಾಗರ್ ಬಣ) ಆಗ್ರಹಿಸಿದೆ.
ಜಗದಾಳ ಗ್ರಾಮದ ದುರ್ಗಾದೇವಿ ದೇವಸ್ಥಾನದ ಸಮೀಪ ರಾಧವ್ವ ಅವರ ಕುಟುಂಬವು ಪತ್ರಾಸ್ ಶೆಡ್ ನಿರ್ಮಿಸಿಕೊಂಡು ದನಕರುಗಳನ್ನು ಸಾಕಿಕೊಂಡು ಜೀವನ ಸಾಗಿಸುತ್ತಿದೆ. ಜಮೀನಿನಲ್ಲಿ ಕಬ್ಬು, ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲಾಗುತ್ತಿತ್ತು. ಆದರೆ, ಆ.8ರಂದು ಜಗದಾಳ ಗ್ರಾಮದ ಪರಶುರಾಮ ಬಸವ್ವಗೋಳ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಸೇರಿದಂತೆ 50ಕ್ಕೂ ಹೆಚ್ಚು ಜನರು ಏಕಾಏಕಿ ಜಮೀನಿಗೆ ತೆರಳಿ ಬೆಳೆ ಹಾನಿಗೊಳಿಸಿ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.
ಘಟನೆಗೆ ಸಂಬಂಧಿಸಿದಂತೆ ರಾಧವ್ವ ಅವರು ಬನಹಟ್ಟಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಲು ಮುಂದಾದಾಗ, ಪಿಎಸ್‌ಐ ಶಿವರಾಜ ಧರಿಗೊಂಡ ಅವರು ದೂರು ದಾಖಲಿಸಲು ನಿರಾಕರಿಸಿದ್ದಾರೆ ಎಂದು ಸಂಘಟನೆ ದೂರಿದೆ. ಬಳಿಕ ಸಂತ್ರಸ್ತರೊಂದಿಗೆ ಜಮಖಂಡಿ ಡಿವೈಎಸ್ಪಿ ಅವರನ್ನು ಭೇಟಿ ಮಾಡಿ ಪ್ರಕರಣ ದಾಖಲಿಸಲು ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ಆದರೂ ಬನಹಟ್ಟಿ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರ್ ಬಣ) ವತಿಯಿಂದ ಬಾಗಲಕೋಟೆ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಎಸ್ಪಿ ಅವರ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು, ಪ್ರಕರಣ ದಾಖಲಿಸಿ ತನಿಖೆ ನಡೆಸುವುದು ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಮನವಿ ಸ್ವೀಕರಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅವರು ಪ್ರಕರಣದ ಕುರಿತು ತಕ್ಷಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಘಟನೆ ತಿಳಿಸಿದೆ.




