ಹಿಂದುಳಿದ ಹಾಗೂ ಶೋಷಿತ ಸಮುದಾಯಗಳಿಗೆ ಸಂವಿಧಾನಬದ್ಧ ಹಕ್ಕುಗಳು ಸಮರ್ಪಕವಾಗಿ ದೊರೆಯಬೇಕು. ಸಾಮಾಜಿಕ ನ್ಯಾಯದ ಪರಿಣಾಮಕಾರಿ ಜಾರಿಯಾಗಬೇಕು ಎಂಬ ಉದ್ದೇಶದಿಂದ ಜುಲೈ 18ರಂದು ಬೀಳಗಿಯಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನದ 9ನೇ ಅನುಸೂಚಿಯಲ್ಲಿ ಸ್ಥಾನ ನೀಡಬೇಕು. ಮುಸ್ಲಿಂ ಸಮುದಾಯಕ್ಕೆ ಇದ್ದ 2ಬಿ ಮೀಸಲಾತಿಯನ್ನು ಮರು ಜಾರಿಗೆ ತರಬೇಕು. ಜೊತೆಗೆ 2025ರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಅನುಷ್ಠಾನಗೊಳಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಪ್ರತಿಭಟನೆಯ ಮೂಲಕ ಮುಂದಿರಿಸಲಾಗುವುದು” ಎಂದು ಹೇಳಿದರು.
“ಬೀಳಗಿ ಕ್ಷೇತ್ರದಲ್ಲಿ ಅಹಿಂದ ವರ್ಗದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರ ಬೆಂಬಲದಿಂದ ಆಯ್ಕೆಯಾದ ಜನಪ್ರತಿನಿಧಿಗಳು ಸಾಮಾಜಿಕ ನ್ಯಾಯದ ಪ್ರಶ್ನೆಗಳ ಕುರಿತು ಹೆಚ್ಚು ಸಕ್ರಿಯವಾಗಿ ಧ್ವನಿ ಎತ್ತಬೇಕಿದೆ” ಎಂದು ಅವರು ಅಭಿಪ್ರಾಯಪಟ್ಟರು.
ಅದೇ ರೀತಿ, ಹಿಂದುಳಿದ ವರ್ಗಗಳು ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ರಾಜಕೀಯ ನಾಯಕರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪರಿಣಾಮಕಾರಿ ಹೋರಾಟ ರೂಪಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಸಿದ್ದಪ್ಪ ಬಳಗಾನೂರ, ಬಸವರಾಜ ಗೋನಾಳ, ಸದಾಶಿವ ಅಗೋಜಿ, ಹಸನಸಾಬ್ ನದಾಫ, ಸಿದ್ದಪ್ಪ ಚಿಂಡಕಿ ಹಾಗೂ ಸಿದ್ದು ಬಾಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.




