ಬೀಳಗಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹೈದರಾಬಾದ್ನಿಂದ ಪಣಜಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ, ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ನೋಂದಣಿ ಹೊಂದಿರುವ ಖಾಸಗಿ ಸ್ಲೀಪರ್ ಬಸ್ವೊಂದು ಹುಬ್ಬಳ್ಳಿ–ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಬೀಳಗಿ ಕ್ರಾಸ್ ಸಮೀಪ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದೆ.
ರಿಲಯನ್ಸ್ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಜಮಖಂಡಿ ತಾಲ್ಲೂಕಿನ ಕುಂಚನೂರ ಗ್ರಾಮದ ಅಮರಸಿದ್ದ ಕಾಂಬಳೆ (34) ಸಾವನ್ನಪ್ಪಿದ್ದಾರೆ. ಬಸ್ ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದ ವೇಳೆ ಬಸ್ನಲ್ಲಿ ಸುಮಾರು 15ರಿಂದ 20 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬೀಳಗಿ ಪೊಲೀಸರು ತಲುಪಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣದ ಕುರಿತು ಪರಿಶೀಲನೆ ನಡೆಯುತ್ತಿದೆ.




