ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಸೋಮನಕೊಪ್ಪ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿಯಲ್ಲಿ ಸುಮಾರು ನಾಲ್ಕು ಎಕರೆ ಕೃಷಿ ಬೆಳೆ ಬೆಂಕಿಗೆ ಆಹುತಿಯಾಗಿದೆ. ಇದರಲ್ಲಿ ಒಂದು ಎಕರೆ ಗೋವಿನಜೋಳ ಮತ್ತು ಮೂರು ಎಕರೆ ಕಬ್ಬಿನ ಬೆಳೆ ನಾಶವಾಗಿದೆ.
ಗ್ರಾಮದ ಸರ್ವೆ ನಂಬರ್ 3ರಲ್ಲಿ ಫಕೀರಪ್ಪ ಶಿವಪ್ಪ ಮಣ್ಣೂರರಿಗೆ ಸೇರಿದ ಮೂರು ಎಕರೆ ಕಬ್ಬಿನ ಬೆಳೆ ಬೆಂಕಿಯಿಂದ ಸುಟ್ಟುಹೋಗಿದೆ. ಅದೇ ರೀತಿ ಪಕ್ಕದ ಹೊಲದಲ್ಲಿ ಮಂಜುಳಾ ಮತ್ತು ಸಿದ್ದಪ್ಪ ಜಂಗಣ್ಣವರರಿಗೆ ಸೇರಿದ ಸರ್ವೆ ನಂಬರ್ 2/2ರಲ್ಲಿನ ಒಂದು ಎಕರೆ ಗೋವಿನಜೋಳದ ಬೆಳೆಯೂ ಬೆಂಕಿಗೆ ಆಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಜಮೀನಿಗೆ ವ್ಯಾಪಿಸಿ ಒಟ್ಟು ನಾಲ್ಕು ಎಕರೆ ಬೆಳೆ ನಾಶವಾಗಿದ್ದು, ರೈತರು ಅಪಾರ ನಷ್ಟ ಅನುಭವಿಸುವಂತಾಗಿದೆ.

ಬಾದಾಮಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಪದೇಪದೇ ಅಗ್ನಿ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ರೈತರ ಬೆಳೆ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗಾಗಿ ಕುಳಗೇರಿ ಕ್ರಾಸ್‌ನಲ್ಲಿ ಅಗ್ನಿಶಾಮಕ ದಳದ ಕಚೇರಿ ಸ್ಥಾಪಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ತುರ್ತು ಸಂದರ್ಭದಲ್ಲಿ ಅಗ್ನಿಶಾಮಕ ವಾಹನಗಳು ತಕ್ಷಣವೇ ಘಟನಾ ಸ್ಥಳಕ್ಕೆ ತಲುಪುವ ವ್ಯವಸ್ಥೆ ಕಲ್ಪಿಸಿದರೆ ಬೆಂಕಿ ಅವಘಡಗಳಿಂದ ಉಂಟಾಗುವ ಬೆಳೆ ನಷ್ಟವನ್ನು ಕಡಿಮೆ ಮಾಡಬಹುದು. ಆದ್ದರಿಂದ ಬಾದಾಮಿ ಕ್ಷೇತ್ರದ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ ಅವರು ರೈತರ ಈ ಬೇಡಿಕೆಯನ್ನು ಶೀಘ್ರವಾಗಿ ಈಡೇರಿಸಬೇಕೆಂದು ಮನವಿ ಮಾಡಿದ್ದಾರೆ.
ಅಗ್ನಿ ಅವಘಡದಿಂದ ಸಂಕಷ್ಟಕ್ಕೆ ಸಿಲುಕಿದ ರೈತರು ದೂರವಾಣಿ ಮೂಲಕ ಬಾದಾಮಿ ಕ್ಷೇತ್ರದ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ ಅವರಿಗೆ ಘಟನೆಯ ಮಾಹಿತಿ ನೀಡಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಕುಳಗೇರಿ ಕ್ರಾಸ್ ವಿದ್ಯುತ್ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾದಾಮಿ ಅಗ್ನಿಶಾಮಕ ದಳದ ಠಾಣಾಧಿಕಾರಿ ತಿಪ್ಪಣ್ಣ ವಡ್ಡರ್ ಹಾಗೂ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದೇ ವೇಳೆ ಗ್ರಾಮದ ಯುವಕರು ಮತ್ತು ಗುರುಹಿರಿಯರು ಒಗ್ಗಟ್ಟಾಗಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಅಗ್ನಿ ಅವಘಡದಿಂದ ಕಬ್ಬು ಮತ್ತು ಗೋವಿನಜೋಳದ ಬೆಳೆ ಕಳೆದುಕೊಂಡಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಸಂತ್ರಸ್ತ ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಬೆಳೆ ಹಾನಿಯ ಕುರಿತು ಸಮಗ್ರ ಪರಿಶೀಲನೆ ನಡೆಸಿ, ನಷ್ಟದ ಪ್ರಮಾಣವನ್ನು ಅಂದಾಜಿಸಿ ರೈತರಿಗೆ ಸರ್ಕಾರದಿಂದ ಅಗತ್ಯ ಪರಿಹಾರ, ನೆರವು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.




