ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತರನ್ನು ರಿಂದವ್ವ ಹನಮಂತ ಭಂಟನೂರು (60) ಎಂದು ಗುರುತಿಸಲಾಗಿದೆ. ಇವರು ಮುಳ್ಳೂರ ಗ್ರಾಮದ ನಿವಾಸಿಯಾಗಿದ್ದು, ಪ್ರತಿದಿನದಂತೆ ನರೇಗಾ ಯೋಜನೆಯಡಿ ಗ್ರಾಮದಲ್ಲಿ ನಡೆಯುತ್ತಿದ್ದ ಕಾಮಗಾರಿಯಲ್ಲಿ ಪಾಲ್ಗೊಂಡಿದ್ದರು. ಕೆಲಸದ ಅವಧಿಯಲ್ಲಿ ಬೆಳಿಗ್ಗೆ ಏಕಾಏಕಿ ತಲೆ ಸುತ್ತು ಬಂದು ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ತಕ್ಷಣ ಸ್ಥಳದಲ್ಲಿದ್ದ ಸಹೋದ್ಯೋಗಿಗಳು ಹಾಗೂ ಗ್ರಾಮಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಮಾರ್ಗ ಮಧ್ಯೆಯೇ ರಿಂದವ್ವ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿದ ಹೂವಿನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿ ಪಡಿಯಪ್ಪ ಕೊಳಮಲಿ, “ನರೇಗಾ ಕಾಮಗಾರಿಯಲ್ಲಿ ಕೆಲಸ ಮಾಡುವಾಗ ಬೆಳಿಗ್ಗೆ ತಲೆ ಸುತ್ತು ಬಂದು ಅವರು ಕೆಳಗೆ ಬಿದ್ದಿದ್ದರು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದುರದೃಷ್ಟವಶಾತ್ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.
ಘಟನೆಯಿಂದ ಕುಟುಂಬಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿಯೂ ಶೋಕ ಆವರಿಸಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ನೆರವು ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.




