ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು ನಡೆದಿವೆ ಎಂದು ಆರೋಪಿಸಿ, SIR ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು. ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ ಎಲ್ಲ ಅರ್ಹ ನಾಗರಿಕರ ಹೆಸರುಗಳನ್ನು ತಕ್ಷಣ ಮರು ಸೇರ್ಪಡೆ ಮಾಡಬೇಕು ಹಾಗೂ ಈ ಅವ್ಯವಹಾರಗಳ ನೈತಿಕ ಹೊಣೆ ಹೊತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹಿಸಿದೆ.
ಈ ಕುರಿತು ಬಾಗಲಕೋಟೆ ಜಿಲ್ಲೆಯ ಇಲಕಲ್ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುರ್ತುಜಾ ಕಕ್ಬಾಲ್, ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗಳು ಪ್ರಜಾಪ್ರಭುತ್ವದ ಜೀವಾಳ. ಆದರೆ ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ಸುಮಾರು 1.08 ಕೋಟಿ ಮತದಾರರನ್ನು ASDDO ವರ್ಗದಲ್ಲಿ ಗುರುತಿಸಿರುವುದು ಹಾಗೂ ಲಕ್ಷಾಂತರ ಜನರಿಗೆ ನೋಟಿಸ್ ನೀಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಫಾರಂ-7 ಅನ್ನು ವ್ಯವಸ್ಥಿತವಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಇದು ಚುನಾವಣಾ ಆಯೋಗದ ಪಾರದರ್ಶಕತೆಯ ಬಗ್ಗೆಯೇ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದರು.
ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಪ್ರಜಾಸತ್ತಾತ್ಮಕ ಶಕ್ತಿಯಾಗಿದೆ. ಯಾವುದೇ ಕಾರಣಕ್ಕೂ ಒಬ್ಬನೇ ಒಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಅವಕಾಶ ನೀಡುವುದಿಲ್ಲ ಎಂದು ಸೋಲಿಡಾರಿಟಿ ಇಲಕಲ್ ನಗರ ಅಧ್ಯಕ್ಷ ಮೊಹಮ್ಮದ್ ಸಿರಾಜ್ ಹುಣಚಗಿ ಹೇಳಿದರು.
SIR ಪ್ರಕ್ರಿಯೆಯಲ್ಲಿ ನಡೆದಿರುವ ಲೋಪಗಳ ಸಂಪೂರ್ಣ ನೈತಿಕ ಹೊಣೆ ಹೊತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು. ಈ ಅನ್ಯಾಯದ ವಿರುದ್ಧ ಯುವಜನತೆ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಅವರು ಎಚ್ಚರಿಸಿದರು.
ಪ್ರಮುಖ ಬೇಡಿಕೆಗಳು:
ಅವೈಜ್ಞಾನಿಕ SIR ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು.
ಮತದಾರರ ಪಟ್ಟಿಯಿಂದ ಕೈಬಿಡಲಾದ ಎಲ್ಲ ಅರ್ಹ ನಾಗರಿಕರ ಹೆಸರುಗಳನ್ನು ತಕ್ಷಣ ಮರು ಸೇರ್ಪಡೆ ಮಾಡಬೇಕು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು.
ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ 2023ರ ತಿದ್ದುಪಡಿಯನ್ನು ರದ್ದುಪಡಿಸಿ, ಸ್ವತಂತ್ರ ಸಾಂವಿಧಾನಿಕ ಸಮಿತಿಯ ಮೂಲಕ ಚುನಾವಣಾ ಆಯೋಗದ ಆಯುಕ್ತರನ್ನು ಆಯ್ಕೆ ಮಾಡಬೇಕು.
ಫಾರಂ-7 ದುರುಪಯೋಗಪಡಿಸಿಕೊಂಡು ಅರ್ಹ ಮತದಾರರ ಹೆಸರು ತೆಗೆದುಹಾಕಲು ಯತ್ನಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳ ನೇರ ಮೇಲ್ವಿಚಾರಣೆಯಲ್ಲಿ ನಡೆಸಬೇಕು.
ECINet ಸೇರಿದಂತೆ ಮತದಾರರ ಡಿಜಿಟಲ್ ಡೇಟಾಬೇಸ್ ನಿರ್ವಹಣೆಗೆ ಸ್ವತಂತ್ರ ತಾಂತ್ರಿಕ ಆಡಿಟ್ ನಡೆಸಬೇಕು.
ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತರಾದ ಶಾಮಿದ್ ರೇಷ್ಮಿ, ಸೈಫನ್ ಸಾಬ್ ಹಂಗಿ ಸೇರಿದಂತೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಪ್ರಮುಖರು ಇದ್ದರು.




