ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು ಜನರ ಬಳಿಗೆ ಆಡಳಿತವೇ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಬಸವಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಸಾರ್ವಜನಿಕರಿಂದ ಸ್ವೀಕರಿಸಲಾಗುತ್ತಿರುವ ಅರ್ಜಿಗಳನ್ನು ಕೇವಲ ದಾಖಲಿಸಿಕೊಂಡು ಬಾಕಿ ಉಳಿಸದೆ, ನಿಗದಿತ ಅವಧಿಯಲ್ಲಿ ಪರಿಶೀಲಿಸಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ” ಎಂದರು.
ಜಿಲ್ಲೆಯಲ್ಲಿ ಪ್ರಜಾಸೇವಾ ಆಂದೋಲನದ ಮೂಲಕ ಈವರೆಗೆ 4 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 786 ಅರ್ಜಿಗಳು ಮಾತ್ರ ಬಾಕಿ ಉಳಿದಿವೆ. ಬಾಕಿ ಅರ್ಜಿಗಳನ್ನೂ ತ್ವರಿತವಾಗಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರಿಂದ ಬಂದ ಅರ್ಜಿಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಜನರ ಸಮಸ್ಯೆಗಳನ್ನು ಆಲಿಸುವುದು ಹಾಗೂ ಅವುಗಳಿಗೆ ಪರಿಹಾರ ಕಲ್ಪಿಸುವುದು ಆಡಳಿತದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿದರು.
ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಜಾಸೇವಾ ಆಂದೋಲನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಸರ್ಕಾರದ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ಇಂತಹ ಜನಸಂಪರ್ಕ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆಯಬೇಕು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಜಿಪಂ ಅಧಿಕಾರಿ ಎನ್.ವೈ. ಬಸರಿಗಿಡದ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ಬಡಿಗೇರ, ಪೌರಾಯುಕ್ತ ಜ್ಯೋತಿ ಗಿರೀಶ, ತಾಪಂ ಅಧಿಕಾರಿ ಮಲ್ಲಿಕಾರ್ಜುನ ಬಡಿಗೇರ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅನಿಲಕುಮಾರ ದಡ್ಡಿ, ತಾಲೂಕು ಅಧ್ಯಕ್ಷ ಕಲ್ಲಪ್ಪ ಗಿರಡ್ಡಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಅನ್ವರ ಮೋಮಿನ, ಸಮೀರ ಕಂಗನೊಳ್ಳಿ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




