ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ ಬಿತ್ತನೆ ಬೀಜ ಒದಗಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಬರದಿಂದ ಸಂಕಷ್ಟಕ್ಕೀಡಾಗಿರುವ ಅನ್ನದಾತರಿಗೆ ಕೇಂದ್ರ ಸರ್ಕಾರವೂ ತಕ್ಷಣ ನೆರವು ನೀಡಬೇಕು ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ಆಗ್ರಹಿಸಿದರು.
ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯ ನಿರೀಕ್ಷೆಯಲ್ಲಿರುವ ರೈತರಿಗೆ ಕೃಷಿ ಇಲಾಖೆ ವತಿಯಿಂದ ಬಿಳಿ ಜೋಳ ಹಾಗೂ ಕಡಲೆ ಸೇರಿದಂತೆ ಅಗತ್ಯ ಬೀಜಗಳನ್ನು ವಿತರಿಸಲಾಗುತ್ತಿದೆ. ರೈತರಿಗೆ ಸರ್ಕಾರದ ನೆರವು ಮುಂದುವರಿಯಲಿದೆ ಎಂದು ಹೇಳಿದರು.
ಬರಪೀಡಿತ ತಾಲೂಕುಗಳ ರೈತರಿಗೆ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಪರಿಹಾರ ನೀಡುವ ಕ್ರಮ ಕೈಗೊಂಡಿದೆ. ಕಳೆದ ವರ್ಷ ರಾಜ್ಯಕ್ಕೆ ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ 136 ಶಾಸಕರೊಂದಿಗೆ ದೆಹಲಿಗೆ ತೆರಳಿ ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆಗೆ ಒತ್ತಾಯಿಸಲಾಗಿತ್ತು ಎಂದು ಕಾಶಪ್ಪನವರ ಹೇಳಿದರು.
This video cannot be played in your browser. Open the video directly
ಪ್ರಸ್ತುತ ಇಡೀ ರಾಜ್ಯವೇ ಬರದ ಸಂಕಷ್ಟ ಎದುರಿಸುತ್ತಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಕೋರಿ ಹಲವು ಬಾರಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಬರ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳುಹಿಸಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ರೈತರ ಸಂಕಷ್ಟವನ್ನು ಪರಿಗಣಿಸಿ ತ್ವರಿತವಾಗಿ ಬರ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.
ಕೃಷಿ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ಮಾತನಾಡಿ, ಭೂಮಿಯಲ್ಲಿ ಅಗತ್ಯ ಪ್ರಮಾಣದ ತೇವಾಂಶವಿದ್ದಾಗ ಮಾತ್ರ ರೈತರು ಬಿತ್ತನೆ ಕಾರ್ಯ ಆರಂಭಿಸಬೇಕು. ಬಿತ್ತನೆಗೂ ಮುನ್ನ ಟ್ರೈಕೋಡರ್ಮಾ ಬಳಸಿ ಬೀಜೋಪಚಾರ ಮಾಡಿಕೊಳ್ಳುವುದರಿಂದ ಬೆಳೆಗಳಿಗೆ ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.
ಹುನಗುಂದ ತಾಲೂಕು ‘ನೇಗಿಲ ಯೋಗಿ’ ಯೋಜನೆಗೆ ಆಯ್ಕೆಯಾಗಿದ್ದು, ಯೋಜನೆಯ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಕೆ.ಎಸ್. ಆಗಸನಾಳ, ಬಸವರಾಜ ಟಕ್ಕಳಕಿ, ಶೇಖರಪ್ಪ ಪರ್ವತಿ, ಬಸಯ್ಯ ಹಿರೇಮಠ, ನಾಗಪ್ಪ ಬಿಳಗಿ, ಶರಣಗೌಡ ಅರಸೀಬಿಡಿ, ಬಸವರಾಜ ಹೊಸಮನಿ, ಎಪಿಎಂಸಿ ಕಾರ್ಯದರ್ಶಿ ಆರ್.ಎಂ. ದಂಡಿನ ಸೇರಿದಂತೆ ಹಲವರು ಉಪಸ್ಥಿತರಿದ್ದರು.





