ಕೃಷ್ಣಾ ನದಿ ನೀರನ್ನು ದಕ್ಷಿಣ ಕರ್ನಾಟಕದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸುವ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ನೀಡಿರುವ ಹೇಳಿಕೆಗೆ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿರುವುದಕ್ಕೆ ರೈತ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
“ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ಹರಿಸುವ ಯೋಜನೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಾಗುವುದು” ಎಂದು ಕೇಂದ್ರ ಸಚಿವ ಸೋಮಣ್ಣ ಇತ್ತೀಚೆಗೆ ಹೇಳಿಕೆ ನೀಡಿದ್ದರು. “ಹಿಂದೊಮ್ಮೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರೂ ಇದೇ ರೀತಿಯ ಹೇಳಿಕೆ ನೀಡಿದ್ದರು. ಆಗಲೂ ಕೃಷ್ಣಾ ನೀರಿನ ಹಕ್ಕು ಹೊಂದಿರುವ ಉತ್ತರ ಕರ್ನಾಟಕದ ಜನಪ್ರತಿನಿಧಿಗಳಿಂದ ನಿರೀಕ್ಷಿತ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿರಲಿಲ್ಲ” ಎಂಬ ಅಸಮಾಧಾನ ರೈತರಲ್ಲಿದೆ.
ಈಗಾಗಲೇ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಮೂರನೇ ಹಂತದ ನೀರು ಹಂಚಿಕೆಯಲ್ಲಿಯೂ ಬಾಗಲಕೋಟೆ ಜಿಲ್ಲೆಗೆ ಅನ್ಯಾಯವಾಗಿದೆ ಎಂಬ ಆರೋಪವಿದೆ. ವಿಜಯಪುರ ಜಿಲ್ಲೆಗೆ ಸುಮಾರು 80 ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದರೆ, ಬಾಗಲಕೋಟೆ ಜಿಲ್ಲೆಗೆ ಕೇವಲ 4.5 ಟಿಎಂಸಿ ಅಡಿ ನೀರು ಹಂಚಿಕೆಯಾಗಿದೆ. ವಿಜಯಪುರ ಜಿಲ್ಲೆಯ ಬಹುತೇಕ ಪ್ರದೇಶ ನೀರಾವರಿ ಸೌಲಭ್ಯ ಪಡೆದಿದ್ದರೂ, ಹುನಗುಂದ, ಇಳಕಲ್, ಬಾದಾಮಿ ಸೇರಿದಂತೆ ಬಾಗಲಕೋಟೆ ಜಿಲ್ಲೆಯ ಹಲವು ತಾಲ್ಲೂಕುಗಳ ಭೂಮಿ ಇನ್ನೂ ನೀರಾವರಿಗಾಗಿ ಕಾಯುತ್ತಿದೆ.
“ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಐದು ವರ್ಷಗಳೊಳಗೆ ಯುಕೆಪಿ ಸೇರಿದಂತೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ₹2 ಲಕ್ಷ ಕೋಟಿ ವೆಚ್ಚ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಆ ಭರವಸೆ ಈಡೇರಿಲ್ಲ” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಯುಕೆಪಿ ಯೋಜನೆಯ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಬಾಗಲಕೋಟೆಯಲ್ಲಿ ಹಲವು ಬಾರಿ ಹೋರಾಟಗಳು ನಡೆದಿವೆ. ಮೂರು ವರ್ಷಗಳಲ್ಲಿ ಪರಿಹಾರ ವಿತರಿಸುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಇದುವರೆಗೆ ಸಮರ್ಪಕವಾಗಿ ಪರಿಹಾರ ದೊರೆತಿಲ್ಲ. ಒಂದೂವರೆ ವರ್ಷದಲ್ಲಿ ಕೇವಲ ₹3 ಸಾವಿರ ಕೋಟಿ ಮಾತ್ರ ಬಿಡುಗಡೆಯಾಗಿದೆ” ಎಂಬುದು ಸಂತ್ರಸ್ತರ ಅಸಮಾಧಾನಕ್ಕೆ ಕಾರಣವಾಗಿದೆ.
ಚುನಾವಣೆ ಸಂದರ್ಭದಲ್ಲಿ ಮಾತ್ರ ಯುಕೆಪಿ ಯೋಜನೆ ಹಾಗೂ ನೀರಾವರಿ ಕುರಿತು ಮಾತನಾಡುವ ಜನಪ್ರತಿನಿಧಿಗಳು, ಚುನಾವಣೆ ಮುಗಿದ ಬಳಿಕ ಸಮಸ್ಯೆಗಳನ್ನು ಮರೆತುಬಿಡುತ್ತಾರೆ. ಜಿಲ್ಲೆಯ ನೀರಿನ ಹಕ್ಕಿಗೆ ಸಂಬಂಧಿಸಿದಂತೆ ಅನ್ಯಾಯವಾಗುತ್ತಿದ್ದರೂ ಧ್ವನಿ ಎತ್ತುತ್ತಿಲ್ಲ ಎಂಬುದು ರೈತರ ಆರೋಪವಾಗಿದೆ.
ಉತ್ತರ ಕರ್ನಾಟಕ ಅಭಿವೃದ್ಧಿಯಿಂದ ವಂಚಿತವಾಗಲು ಈ ಭಾಗದ ರಾಜಕಾರಣಿಗಳ ಸ್ವಾರ್ಥ ಮನೋಭಾವವೇ ಪ್ರಮುಖ ಕಾರಣವಾಗಿದೆ ಎಂದು ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಸಂಚಾಲಕ ಪ್ರಕಾಶ ಅಂತರಗೊಂಡ ಆರೋಪಿಸಿದ್ದಾರೆ.
ಯುಕೆಪಿ ಯೋಜನೆಗಾಗಿ ರೈತರು ಅಪಾರ ಪ್ರಮಾಣದ ಭೂಮಿ ಕಳೆದುಕೊಂಡಿದ್ದಾರೆ. ಆದರೆ, ಅನೇಕರಿಗೆ ಇನ್ನೂ ಸೂಕ್ತ ಪರಿಹಾರ ದೊರೆತಿಲ್ಲ. ಜಿಲ್ಲೆಯ ಬಹುಪಾಲು ಭೂಮಿ ನೀರಾವರಿಗೆ ಒಳಪಟ್ಟಿಲ್ಲ. ಕೆರೆಗಳನ್ನು ತುಂಬಿಸುವ ಯೋಜನೆಗಳೂ ನಿರೀಕ್ಷಿತ ರೀತಿಯಲ್ಲಿ ಜಾರಿಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೃಷ್ಣಾ ನದಿಯ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸುವ ಪ್ರಸ್ತಾವನೆ ಎಷ್ಟು ಸಮಂಜಸ ಎಂಬುದನ್ನು ಸರ್ಕಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.





