ಬಾಗಲಕೋಟೆ ಜಿಲ್ಲೆಯ ಮುಧೋಳದ ಮಂಟೂರ ಕೆರೆಗೆ ಭೇಟಿ ನೀಡಿ, ಕೆರೆಯ ನಿರ್ವಹಣೆ, ನೀರಿನ ಸಂಗ್ರಹ ಸಾಮರ್ಥ್ಯ, ಸ್ವಚ್ಛತೆ ಹಾಗೂ ಸಂರಕ್ಷಣಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ ಕೆರೆಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಪರಿಶೀಲಿಸಿದರು.
ಮಂಟೂರ ಗ್ರಾಮ ಪಂಚಾಯತಿಯ ಡಿಜಿಟಲ್ ಗ್ರಂಥಾಲಯ ವೀಕ್ಷಿಸಿದ ಅವರು, “ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ಹಾಗೂ ಯುವಜನರು ಡಿಜಿಟಲ್ ಗ್ರಂಥಾಲಯದ ಸೌಲಭ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳಲು ಅರಿವು ಮೂಡಿಸಬೇಕು” ಎಂದು ಸೂಚಿಸಿದರು.
ಮೆಳ್ಳಿಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿಶೋರಿ ಗ್ರಾಮದಲ್ಲಿ ಜಲಜೀವನ್ ಕಾಮಗಾರಿಗಳನ್ನು ಪರಿಶೀಲಿಸಿ, ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೈಗೊಂಡಿರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿ ಒಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಶೈಕ್ಷಣಿಕ ವಾತಾವರಣ, ವಸತಿ, ಮೂಲಸೌಕರ್ಯದ ಕುರಿತು ಪರಿಶೀಲಿಸಿ, ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆ ಹಾಗೂ ಕಲಿಕಾ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಲಾ ಆಡಳಿತಕ್ಕೆ ಸೂಚಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವೈದ್ಯಕೀಯ ಸೇವೆಗಳು, ಔಷದ ಲಭ್ಯತೆ, ವೈದ್ಯರು ಮತ್ತು ಸಿಬ್ಬಂದಿ ಹಾಜರಾತಿ, ತಾಯಿ ಮಗು ಆರೋಗ್ಯ ಸೇವೆ ಹಾಗೂ ಆಸ್ಪತ್ರೆಯ ಸ್ವಚ್ಛತೆ ಪರಿಶೀಲಿಸಿದ ನಂತರ, “ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ನಿರಂತರತೆ ಕಾಯ್ದುಳ್ಳಬೇಕು” ಎಂದು ಸೂಚಿಸಿದರು.




