ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಧೋಳ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರನ್ನು ಖುದ್ದು ಭೇಟಿ ಮಾಡಿದ ಶಾಸಕ ಆರ್ ಬಿ ತಿಮ್ಮಾಪುರ, ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಿಸಿದ ಅಹವಾಲು ಸ್ವೀಕರಿಸಿ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ನೇರವಾಗಿ ಭೇಟಿಯಾಗಿ ಶಾಸಕರು,ಜನ ಸಾಮಾನ್ಯರ ಕುಂದುಕೊರತೆಗಳು, ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಆಲಿಸಲಾಯಿತು. ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾರ್ವಜನಿಕರು ಸಲ್ಲಿಸಿದ ಮನವಿಗಳನ್ನು ಸ್ವೀಕರಿಸಿ, ಅವುಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.
“ಕ್ಷೇತ್ರದ ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿ, ಸಾಧ್ಯವಾದಷ್ಟು ತ್ವರಿತವಾಗಿ ಪರಿಹಾರ ಒದಗಿಸುವುದು ಆದ್ಯತೆ” ಎಂದು ಹೇಳಿದರು.
ಸಾರ್ವಜನಿಕರು ಸಲ್ಲಿಸಿದ ಪ್ರತಿಯೊಂದು ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂಬ ಆಶಯ ವ್ಯಕ್ತಪಡಿಸಿದರು.
“ಜನರ ಸೇವೆಯೇ ನಮ್ಮ ಪ್ರಥಮ ಆದ್ಯತೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆ ಎದುರಿಸಿದರೂ ಅದನ್ನು ನಮ್ಮ ಗಮನಕ್ಕೆ ತಂದರೆ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕೀಲ ಅಶೋಕ್ ಕಿವಡಿ, ಪಕ್ಷದ ಪ್ರಮುಖ ಮುಖಂಡ ಸಂಜು ನಾಯಕ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.




