ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ರಾಂಪುರ ಗ್ರಾಮೀಣ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹95 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮೇಶ್ ಮೇಟಿ ಭೂಮಿಪೂಜೆ ನೆರವೇರಿಸಿದರು.
ನಾಗರಾಳ ಹಾಗೂ ನಾಗಸಂಪಗಿ ಗ್ರಾಮಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಗ್ರಾಮೀಣ ಭಾಗದ ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ತಮ್ಮ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದ್ದು, ಜನರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.
ನಾಗರಾಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ಸಂಪರ್ಕಿಸುವ ರಸ್ತೆಗೆ ₹50 ಲಕ್ಷ ವೆಚ್ಚದಲ್ಲಿ ಡಾಂಬರೀಕರಣ ಹಾಗೂ ಅಗತ್ಯವಿರುವ ಕಡೆ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುವುದು. ಇದೇ ವೇಳೆ ನಾಗಸಂಪಗಿ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ₹45 ಲಕ್ಷ ವೆಚ್ಚದಲ್ಲಿ ಡಾಂಬರೀಕರಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಗ್ರಾಮಸ್ಥರಿಗೆ ಉತ್ತಮ ರಸ್ತೆ ಸೌಲಭ್ಯ ದೊರೆಯಲಿದ್ದು, ಕೃಷಿ ಉತ್ಪನ್ನಗಳ ಸಾಗಣೆ, ವಿದ್ಯಾರ್ಥಿಗಳ ಸಂಚಾರ ಹಾಗೂ ದೈನಂದಿನ ಓಡಾಟ ಮತ್ತಷ್ಟು ಸುಲಭವಾಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಬಸವಂತಪ್ಪ ಮೇಟಿ, ಹನುಮಂತ ಗಣಿ, ಆನಂದ ಮೇಟಿ, ಹುಲ್ಲಪ್ಪ ತೇಜಿ, ಬಸಲಿಂಗಪ್ಪ ಬಿರದಾರ, ಹನುಮಂತ ಹಂಡಿ, ಸಂಗಪ್ಪ ಸೀತಿಮನಿ, ಗೋವಿಂದ ಪೂಜಾರಿ, ಪವನ ಧರ್ಮರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




