ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರ, ಪಾರದರ್ಶಕವಾಗಿ ಹಾಗೂ ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹೇಶ ಮಾಲಗಿತ್ತಿ ಹೇಳಿದರು.
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭೂಮಾಪಕರ ನೇಮಕಾತಿ ಪರೀಕ್ಷೆಗೆ 5,935 ಅಭ್ಯರ್ಥಿಗಳು ಹಾಜರಾಗಲಿದ್ದು, ಬಾಗಲಕೋಟೆ ನಗರದಲ್ಲಿ 14 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಪರೀಕ್ಷೆಗೆ 27,600 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಒಟ್ಟು 54 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಾಗಲಕೋಟೆಯಲ್ಲಿ 24, ಬಾದಾಮಿಯಲ್ಲಿ 2, ಬೀಳಗಿಯಲ್ಲಿ 5, ಹುನಗುಂದದಲ್ಲಿ 2, ಇಲಕಲ್‌ನಲ್ಲಿ 1, ಜಮಖಂಡಿಯಲ್ಲಿ 9, ಮುಧೋಳದಲ್ಲಿ 5, ರಬಕವಿ-ಬನಹಟ್ಟಿಯಲ್ಲಿ 5 ಹಾಗೂ ತೇರದಾಳದಲ್ಲಿ 1 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.
ಎರಡೂ ನೇಮಕಾತಿ ಪರೀಕ್ಷೆಗಳನ್ನು ಯಾವುದೇ ಗೊಂದಲ, ಲೋಪಕ್ಕೆ ಅವಕಾಶವಿಲ್ಲದಂತೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಭದ್ರತೆ ಕಾಪಾಡುವ ಉದ್ದೇಶದಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯವಸ್ಥೆಯನ್ನು ಜಿಲ್ಲಾಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಗೆ ವಿವಿಧ ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಪರೀಕ್ಷೆ ನಡೆಯುವ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆ, ಅಭ್ಯರ್ಥಿಗಳ ತಪಾಸಣೆ, ಕ್ಯೂಆರ್ ಕೋಡ್ ಆಧಾರಿತ ಗುರುತಿನ ಪರಿಶೀಲನೆ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಕೇಂದ್ರಗಳು, ಸೈಬರ್ ಕೇಂದ್ರಗಳು ಹಾಗೂ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು. ನಿಷೇಧಾಜ್ಞೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಕೆಲವು ಸಮುದಾಯಗಳ ಅಭ್ಯರ್ಥಿಗಳು ಧಾರ್ಮಿಕ ಉಡುಪು ಧರಿಸಿ ಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ, ಪರೀಕ್ಷೆ ಆರಂಭಕ್ಕೆ ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದ ವಸ್ತ್ರಸಂಹಿತೆ ಅಧಿಕಾರಿಯ ಮುಂದೆ ಹಾಜರಾಗಿ ಪರಿಶೀಲನೆಗೆ ಒಳಗಾಗಬೇಕು ಎಂದು ಮಹೇಶ ಮಾಲಗಿತ್ತಿ ತಿಳಿಸಿದರು.
ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಕಾಂಬಳೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




