ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಿ ನಿಗದಿತ ಅವಧಿಯೊಳಗೆ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರ ತಂಡಗಳು ಮನೆ ಮನೆಗೆ ತೆರಳಿ ಈಗಾಗಲೇ ಶೇ.95ರಷ್ಟು ಗಣತಿ ನಮೂನೆಗಳನ್ನು ವಿತರಿಸಿದ್ದು, ಶೇ.17.85ರಷ್ಟು ನಮೂನೆಗಳ ಡಿಜಿಟಲೈಜೇಷನ್ ಪೂರ್ಣಗೊಂಡಿರುವುದಾಗಿ ಮಾಹಿತಿ ನೀಡಿದರು.
ವಾರಾಂತ್ಯದ ವಿಶೇಷ ಅಭಿಯಾನ ಯಶಸ್ವಿಯಾಗಲು ಬಿಎಲ್‌ಒಗಳು, ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು, ಪಿಡಿಒಗಳು, ತಾಪಂ ಇಒಗಳು ಹಾಗೂ ನೋಡಲ್ ಅಧಿಕಾರಿಗಳು ಶನಿವಾರ ಮತ್ತು ಭಾನುವಾರ ರಜೆ ಇದ್ದರೂ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಶೇ.90ಕ್ಕೂ ಅಧಿಕ ಗಣತಿ ನಮೂನೆಗಳ ವಿತರಣೆ ಪೂರ್ಣಗೊಂಡಿದ್ದರೂ, ಡಿಜಿಟಲೈಜೇಷನ್ ಪ್ರಮಾಣ ತೃಪ್ತಿಕರವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಡಿಜಿಟಲೈಜೇಷನ್ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್‌ಐಆರ್: ಮನೆಗೆ ನಮೂನೆ ತಲುಪದಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಕರೆ
ಇದೆ ವೇಳೆ, ಕಡಿಮೆ ಪ್ರಗತಿ ಕಂಡುಬಂದಿರುವ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು ಹೆಚ್ಚಿನ ಮುತುವರ್ಜಿ ವಹಿಸಿ ಮತದಾರರಿಂದ ನಮೂನೆಗಳನ್ನು ಭರ್ತಿ ಮಾಡಿಸುವ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಭೆಯಲ್ಲಿ ತಹಶೀಲ್ದಾರ್ ವಾಸುದೇವ ಸ್ವಾಮಿ, ಚುನಾವಣಾ ವಿಭಾಗದ ಶಿರಸ್ತೇದಾರ್ ಮಹೇಶ ಪಾಂಡವ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಹನುಮಂತ ಮಾದರ, ನಾಗರಾಜ ಹದ್ಲಿ, ಹನುಮಂತ ಮಾವಿನಮರದ, ಪ್ರಭು ಹಳ್ಳೂರ, ಉಮೇಶ ಹಂಚಿನಾಳ, ಎಂ ಎಂ ಮುತ್ತಪ್ಪನವರ ಮತ್ತು ಶ್ರೀಧರ ನಾಗರಾಬೆಟ್ಟ ಇದ್ದರು.




