ಜನರನ್ನು ಅಧಿಕಾರಿಗಳ ಕಚೇರಿಗೆ ಅಲೆದಾಡಿಸದೆ, ಅವರ ಬಳಿಗೇ ತೆರಳಿ ಅಹವಾಲು ಆಲಿಸಿ ತ್ವರಿತವಾಗಿ ಪರಿಹಾರ ಒದಗಿಸುವ ಆಶಯವೇ ಪ್ರಜಾಸೇವೆಯ ಉದ್ದೇಶವಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.
ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ಜಿನಸೇನಾಚಾರ್ಯ ಸಮುದಾಯ ಭವನದಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಪ್ರಜಾಸೇವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
“ಸರ್ಕಾರ ಹಾಗೂ ಜನರ ನಡುವಿನ ಅಂತರ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಜಾಸೇವೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆಯಲು ಇದೊಂದು ವೇದಿಕೆಯಾಗಿದೆ. ಆಡಳಿತ ವ್ಯವಸ್ಥೆ ಜನರ ಮನೆ ಬಾಗಿಲಿಗೆ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಮತ್ತಷ್ಟು ಪರಿಣಾಮಕಾರಿಯಾಗುತ್ತದೆ” ಎಂದು ಸಚಿವರು ಹೇಳಿದರು.
“ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜತೆಗೆ ಭೂ ಗ್ಯಾರಂಟಿ ಯೋಜನೆಯನ್ನೂ ಜಾರಿಗೊಳಿಸುವ ಮೂಲಕ ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಿದೆ. ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ರಹಿತರಿಗೆ ಅನುಕೂಲ ಕಲ್ಪಿಸುವ ಗುರಿ ಹೊಂದಲಾಗಿದೆ. ಬಾಗಲಕೋಟೆ ಜಿಲ್ಲೆಯ ಐದು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ಜನರಿಗೆ ಅಗತ್ಯ ನೆರವು ನೀಡಲಾಗುತ್ತಿದೆ” ಎಂದರು.
ವಿದ್ಯುತ್, ಕಾಲುವೆ ನೀರಿಗೆ ಒತ್ತಾಯ
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಚಿವ ವಿಜಯಾನಂದ ಕಾಶಪ್ಪನವರ ಅಹವಾಲು ಸ್ವೀಕಾರ ಕೌಂಟರ್‌ಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿದರು.
ಸಸಾಲಟ್ಟಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಜನರು ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಎದುರಾಗುತ್ತಿರುವ ಸಮಸ್ಯೆ ಕುರಿತು ಸಚಿವರ ಗಮನ ಸೆಳೆದರು. ಇದೇ ವೇಳೆ ಘಟಪ್ರಭಾ ಎಡದಂಡೆ ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವಂತೆ ರೈತರು ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದರು.
418 ಅಹವಾಲು
ಪ್ರಜಾಸೇವೆ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 418 ಅಹವಾಲುಗಳು ಸ್ವೀಕಾರವಾಗಿವೆ. ಈ ಪೈಕಿ 12 ಅಹವಾಲುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪಾಸ್‌ಬುಕ್ ವಿತರಿಸಲಾಯಿತು. ವಿಪತ್ತು ನಿರ್ವಹಣೆ ತರಬೇತಿ ಪಡೆದವರಿಗೆ ಅಗತ್ಯ ಕಿಟ್‌ಗಳನ್ನು ಹಸ್ತಾಂತರಿಸಲಾಯಿತು.
ಈ ಸುದ್ದಿ ಓದಿದ್ದೀರಾ? ಬೀದರ್ ಜಿಲ್ಲೆ ಸಂಪೂರ್ಣ ಬರಪೀಡಿತ ಘೋಷಿಸಿ : ಸಿಎಂಗೆ ರೈತ ನಿಯೋಗ ಭೇಟಿ
ಶಾಸಕ ಸಿದ್ದು ಸವದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ, ಎನ್.ವೈ. ಬಸರಿ ಗಿಡದ, ಸಹಾಯಕ ಆಯುಕ್ತೆ ಶ್ವೇತಾ ಬೀಡಿಕರ, ತಹಶೀಲ್ದಾರ್ ವಿಜಯಕುಮಾರ ಕಡಕೋಳ, ಪೊಲೀಸ್ ವೃತ್ತ ನಿರೀಕ್ಷಕ ಆರ್.ಆರ್. ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ಇರ್ಫಾನ್ ಝಾರೆ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಐನಾಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.




