ಬಾಗಲಕೋಟೆ ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಲೋಕಾಯುಕ್ತ ನ್ಯಾಯಾಲಯದಲ್ಲಿ ಬಾಕಿ ಇದ್ದ 135 ಪ್ರಕರಣಗಳ ವಿಚಾರಣೆ ನಡೆಸಿದರು. ಈ ಪೈಕಿ 47 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಒಂದು ಪ್ರಕರಣ ಉಭಯಪಕ್ಷಗಳ ಸಂಧಾನದ ಮೂಲಕ ಬಗೆಹರಿದಿದೆ.
ವಿಚಾರಣೆ ವೇಳೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸಿದ ಉಪ ಲೋಕಾಯುಕ್ತರು, ಸಂಬಂಧಪಟ್ಟ ಅಧಿಕಾರಿಗಳಿಂದ ಪ್ರಗತಿ ವರದಿ ಪಡೆದು, ಬಾಕಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಉಳಿದ ಪ್ರಕರಣಗಳಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳು ಹಾಗೂ ಮಾಹಿತಿ ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವುದು, ಆಡಳಿತದಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನವನ್ನು ಖಚಿತಪಡಿಸುವುದು ಲೋಕಾಯುಕ್ತ ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ನೀಡಿ, ಪ್ರಕರಣಗಳನ್ನು ಅನಗತ್ಯ ವಿಳಂಬವಿಲ್ಲದೆ ಇತ್ಯರ್ಥಪಡಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ವಿಚಾರಣೆ ವೇಳೆ ಉಪ ಲೋಕಾಯುಕ್ತರ ವೈಯಕ್ತಿಕ ಕಾರ್ಯದರ್ಶಿ ಎಂ. ಅರವಿಂದ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹಿರೆ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಲೋಕಾಯುಕ್ತ ಇಲಾಖೆಯ ಎಸ್‌ಪಿ ಎಂ.ಬಿ. ನಂದಗಾವಿ ಹಾಗೂ ಡಿವೈಎಸ್‌ಪಿ ಸುರೇಶ್ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.




