ಹೊಸದಿಲ್ಲಿಯ ಜಂತರ್-ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರು ಚನ್ನರಾಯಪ್ಪ ಆರೋಪಿಸಿದ್ದಾರೆ.
ಹೇಳಿಕೆ ಬಿಡುಗಡೆ ಮಾಡಿ ಮಾತನಾಡಿರುವ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು ಹಾಗೂ ಶಿಕ್ಷಣ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ, ಅದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಟಿಯರ್ ಗ್ಯಾಸ್ ಪ್ರಯೋಗಿಸಿ, ಲಾಠಿಚಾರ್ಜ್ ನಡೆಸಿರುವುದು ಅಮಾನವೀಯ ಕೃತ್ಯವಾಗಿದೆ ಎಂದು ಟೀಕಿಸಿದ್ದಾರೆ.
ಸಾವಿರಾರು ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರ ಮೇಲೆ ಬಲಪ್ರಯೋಗ ನಡೆಸಿರುವುದು ವಿದ್ಯಾರ್ಥಿಗಳ ಪ್ರಜಾಪ್ರಭುತ್ವದ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದ್ದು, ಇದು ಖಂಡನೀಯ ಮತ್ತು ಅಕ್ಷಮ್ಯ ಕೃತ್ಯ ಎಂದು ಹೇಳಿದ್ದಾರೆ. ಸಂಪೂರ್ಣ ಆಡಳಿತ ವೈಫಲ್ಯದಿಂದ ಕಂಗೆಟ್ಟಿರುವ ಬಿಜೆಪಿ ಸರ್ಕಾರ ಪೊಲೀಸರನ್ನು ಮುಂದೆ ಬಿಟ್ಟು ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಿರುವ ಅವರು, ವಿದ್ಯಾರ್ಥಿಗಳ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರೊಂದಿಗೆ ಮಾತುಕತೆಗೆ ಮುಂದಾಗದೆ, ಅವರನ್ನು ಬಲವಂತವಾಗಿ ಸತ್ಯಾಗ್ರಹ ಸ್ಥಳದಿಂದ ಕರೆದೊಯ್ದಿರುವುದು ಖಂಡನೀಯ ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ..? ಕೋಲಾರ | ಜು.22 ರಂದು ನೀಟ್ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಛಾತ್ರೋಂಕಿ ಗುಂಜ್ ಕಾರ್ಯಕ್ರಮ
ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತುವವರನ್ನು ಪೊಲೀಸ್ ಹಾಗೂ ಇತರೆ ಸಾರ್ವಜನಿಕ ಸಂಸ್ಥೆಗಳ ಮೂಲಕ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದು, ಇದನ್ನು ದೇಶದ ಜನರು ಗಮನಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು
ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರು ಚನ್ನರಾಯಪ್ಪ ಆಗ್ರಹಿಸಿದ್ದಾರೆ.





