ರಾಜಧಾನಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದೀಗ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಗರದ ಯಶವಂತಪುರ ಗಾರೆಪ್ಪನಪಾಳ್ಯ ರಸ್ತೆಯ ಹೂವಿನ ಮಾರ್ಕೆಟ್ ಸಮೀಪ ನಡೆದಿದೆ.
ಗಂಗಾಧರ (21) ಮೃತ ವ್ಯಕ್ತಿ. ಗಂಗಾಧರ ನಗರದ ಖಾಸಗಿ ಕಾಲೇಜ್‌ವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಚ್‌ಎಎಲ್‌ನಲ್ಲಿ ಇಂಟರ್‌ನ್‌ಶಿಪ್‌ಗೆಂದು ಕಾಲೇಜಿನಿಂದ ಸರ್ಟಿಫಿಕೇಟ್ ತರಲು ಗಾರೆಪ್ಪನಪಾಳ್ಯ ರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬಂದ್ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಗಾಧರ ನೆಲಕ್ಕೆ ಬಿದ್ದಿದ್ದಾರೆ. ಈ ಸಮಯದಲ್ಲಿ ಬಸ್‌ನ ಹಿಂಬದಿ ಚಕ್ರ ಗಂಗಾಧರ ಅವರ ಮೇಲೆ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ಹತ್ತು ದಿನದಲ್ಲಿ ಬಿಎಂಟಿಸಿ ಬಸ್‌ನಿಂದ ಮೂರು ಅಪಘಾತ
ಬೆಂಗಳೂರಿನಲ್ಲಿ ಕಳೆದ ಹತ್ತು ದಿನದಲ್ಲಿ ಬಿಎಂಟಿಸಿ ಬಸ್‌ನಿಂದ ಮೂರು ಅಪಘಾತ ಸಂಭವಿಸಿ, ಮೂವರು ಸಾವನ್ನಪ್ಪಿದ್ದಾರೆ.
ಅಕ್ಟೋಬರ್ 5ರಂದು ಸಾಯಂಕಾಲ 5 ಗಂಟೆಗೆ ಅಟ್ಟೂರಿನ ಮದರ್ ಡೈರಿ ಬಳಿ ಓವರ್ ಟೇಕ್ ಮಾಡುವ ವೇಳೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಆಕ್ಟಿವಾ ಬೈಕ್ ಸವಾರ ಭರತ್ ರೆಡ್ಡಿ (23) ನೆಲಕ್ಕೆ ಬಿದ್ದಿದ್ದರು. ಈ ವೇಳೆ, ಬಸ್ ಅವರ ಮೇಲೆ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಈ ಘಟನೆಯ ಬಗ್ಗೆ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಹೆದ್ದಾರಿ | ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು
ಮೂರು ವರ್ಷದ ಮಗು ಸಾವು
ಅಕ್ಟೋಬರ್ 9 ರಂದು ಗಾರೇಪಾಳ್ಯ ಜಂಕ್ಷನ್ನಲ್ಲಿ ಮಗುವೊಂದು ಅವರ ದೊಡ್ಡಮ್ಮನ ಜತೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿತ್ತು. ಈ ವೇಳೆ, ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿತ್ತು. ಪರಿಣಾಮ ಅಯಾನ್ ಎಂಬ ಹೆಸರಿನ ಮಗು ಕೆಳಕ್ಕೆ ಬಿದ್ದಿತ್ತು.
ಈ ವೇಳೆ, ಬಸ್ ಚಕ್ರ ಮಗುವಿನ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿತ್ತು. ಈ ಘಟನೆ ಸಂಬಂಧ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಎಂಟಿಸಿ ಬಸ್ ಹಾಗೂ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.