ಬಂಗಾಳಕೊಲ್ಲಿಯಿಂದ ಫೆಂಗಲ್ ಚಂಡಮಾರುತ ಉಂಟಾಗಿದ್ದು, ಕರ್ನಾಟಕದ ರಾಜಧಾನಿ ಬೆಂಗಳೂರಿನ ಹವಾಮಾನದ ಮೆಲೆಯೂ ಪ್ರಭಾವ ಬೀರಿದೆ. ಡಿಸೆಂಬರ್ 1ರ ಬೆಳ್ಳಂಬೆಳಿಗ್ಗೆ ತಾಪಮಾನ ಕುಸಿದಿದ್ದು, 20 ಡಿಗ್ರಿ ಸೆಲ್ಸಿಯಸ್‌ಗೂ ಕೆಳಕ್ಕೆ ಕುಸಿಯುವ ಸಾಧ್ಯತೆ ಕಂಡುಬಂದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
“ಕೆಲವೆಡೆ ಮುಂಜಾನೆ ಮಂಜು ಮತ್ತು ಚಳಿ ಅನುಭವಕ್ಕೆ ಬಂದರೆ, ಬೆಂಗಳೂರು ನಗರದಲ್ಲಿ ಮಳೆಯ ತುಂತುರು ಹನಿ ಸುರಿಯುತ್ತಿತ್ತು. ಈಗಾಗಲೇ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ ಎರಡು ದಿನಗಳ ಅವಧಿಯಲ್ಲಿ ಕನಿಷ್ಠ ತಾಪಮಾನ 20-21 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪೆಂಗಲ್ ಚಂಡಮಾರುತ ಪರಿಣಾಮ ಬೆಂಗಳೂರು ನಗರದಲ್ಲಿ ಶನಿವಾರ ರಾತ್ರಿಯಿಂದಲೇ ಮಳೆ ಸುರಿದಿದ್ದು, ಇಂದಿರಾನಗರ, ಹಲಸೂರು, ಎಂಜಿ ರಸ್ತೆ, ರಿಚಂಡ್ ರಸ್ತೆ, ಶಾಂತಿನಗರ, ಲಾಲ್‌ಬಾಗ್, ಕೆ ಆರ್ ಮಾರುಕಟ್ಟೆ, ಮೆಜೆಸ್ಟಿಕ್, ಕಾರ್ಪೊರೇಷನ್ ಸುತ್ತಮುತ್ತಲ ಬಡಾವಣೆಗಳಲ್ಲಿ ಮಳೆ ಸುರಿದಿದೆ. ಭಾನುವಾರ ಮುಂಜಾನೆಯಲ್ಲೂ ಮಳೆ ಮುಂದುವರೆದಿದ್ದು, ತಾಪಮಾನ ಕುಸಿದಿದೆ. ಚಳಿ ಹೆಚ್ಚಳವಾಗಿದೆ. ಡಿಸೆಂಬರ್ 2ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬಿಬಿಎಂಪಿ ಅಧಿಕಾರಿಗಳ ರಜೆ ರದ್ದುಗೊಳಿಸಿರುವ ಆಡಳಿತ, ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸೂಚಿಸಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ಭಾನುವಾರ ನಗರದ ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶಿಸಿದ್ದಾರೆ.
“ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ” ಎಂದು ಇಲಾಖೆ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾದ ದೆಹಲಿ ಪೊಲೀಸರು: ನದೀಮ್ ಖಾನ್ ಅಕ್ರಮ ಬಂಧನಕ್ಕೆ ಯತ್ನ
“ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮಂಗಳವಾರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ” ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಫೆಂಗಲ್ ಚಂಡಮಾರುತದಿಂದ ಉಂಟಾದ ಬಲವಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವು 16 ಗಂಟೆಗಳ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಹೀಗಾಗಿ, ಐದು ಅಂತಾರಾಷ್ಟ್ರೀಯ ವಿಮಾನಗಳು ಸೇರಿ 16 ವಿಮಾನಗಳನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(ಕೆಐಎ) ಕಳುಹಿಸಲಾಗಿದೆ. ರೈಲು ಸಂಚಾರದಲ್ಲೂ ವ್ಯತ್ಯಯವಾಗಿದೆ.