ಮುಂಬರುವ ಡಿಸೆಂಬರ್ ವೇಳೆಗೆ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಸಾಹಿತ್ಯ, ಸಾಂಸ್ಕೃತಿಕ ಶ್ರೀಮಂತಿಕೆಯ ಜತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಿದ್ದತೆ ಕುರಿತು ಬೆಂಗಳೂರಿನ ವಿಕಾಸಸೌಧ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರ ಉಪಸ್ಥಿತಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕೃಷಿ ಸಚಿವರು ಕಾರ್ಯಕ್ರಮದ ಸಂಘಟನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಹಲವು ಸಲಹೆ ಸೂಚನೆಗಳನ್ನು ನೀಡಿದರು.
“ಕಾರ್ಯಕ್ರಮದ ಸಂಘಟನೆಯಲ್ಲಿ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಹಣಕಾಸು ಹೊಣೆಗಾರಿಕೆ ಸಂಪೂರ್ಣ ಜಿಲ್ಲಾಡಳಿತಕ್ಕೆ ಸೇರಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರ ಮತ್ತು ಸಹಯೋಗದೊಂದಿಗೆ ಬಜೆಟ್‌ನ ಮಿತಿಯೊಳಗೆ ಆಯೋಜಿಸಬೇಕು” ಎಂದು ತಿಳಿಸಿದರು.
“ಈಗಾಗಲೇ 26 ಉಪಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಸಮಿತಿಗಳಿಗೂ ಸ್ಥಳೀಯ ಶಾಸಕರುಗಳು ನೇತೃತ್ವ ವಹಿಸಿದ್ದು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಕನ್ನಡದ ಅಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ನಡೆಸಬೇಕಾಗಿದೆ” ಎಂದರು.
“ಮಂಡ್ಯ ಜಿಲ್ಲೆಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂಗಳನ್ನು ಒದಗಿಸುವ ಭರವಸೆ ದೊರತಿದೆ. ಅದರ ಮಿತಿಯೊಳಗೆ ಸಂಪೂರ್ಣ ಕಾರ್ಯಕ್ರಮಗಳು ನಡೆಯಬೇಕು. ಯಾವುದೇ ಕಾರಣಕ್ಕೂ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಸಲ್ಲಿಸುವಂತಿಲ್ಲ” ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದರು.
“ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ದೂರದ ಜಿಲ್ಲೆಗಳಿಂದ ಆಗಮಿಸುವ ಹಾಗೂ ಮಂಡ್ಯ ಜಿಲ್ಲೆಯ ಜನತೆಗೆ ಅನುಕೂಲವಾದ ಸ್ಥಳವನ್ನು ಅಂತಿಮಗೊಳಿಸಿ ಸಮ್ಮೇಳನದ ಸಿದ್ದತೆ ಮಾಡಿಕೊಳ್ಳಬೇಕು” ಎಂದು ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ಕೃಷಿ ಸಚಿವರು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, “ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಾಡಿನ ಅತಿ ದೊಡ್ಡ ಸಾಂಸ್ಕೃತಿಕ ನುಡಿ ಹಬ್ಬ. ಇದನ್ನು ಅತ್ಯಂತ ಜವಾಬ್ದಾರಿಯಿಂದ ಎಚ್ಚರಿಕೆಯಿಂದ ನಡೆಸಬೇಕಿದೆ” ಎಂದು ಹೇಳಿದರು.
“ಕರ್ನಾಟಕ ರಾಜ್ಯ 50ನೇ ವರ್ಷದ ಸುವರ್ಣ ಸಂಭ್ರಮದ ಅಂಗವಾಗಿ ಬಿಡುಗಡೆ ಮಾಡಿರುವ ಗುರುತು ಎಲ್ಲ ಕಾರ್ಯಕ್ರಮದಲ್ಲಿ ವಿಶೇಷವಾಗಿ ಬಿಂಬಿತವಾಗಬೇಕು. ಖರ್ಚು-ವೆಚ್ಚಗಳಿಗೆ ಹೊಣೆಗಾರಿಕೆ ಇರಬೇಕು. ಹಾಗಾಗಿ ಎಲ್ಲರೂ ಹೊಂದಾಗಿ ಕಾರ್ಯಕ್ರಮವನ್ನು ಆಯೋಜಿಸೋಣ” ಎಂದು ಕರೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಮಾತನಾಡಿ, “ಸಮ್ಮೇಳನಾಧ್ಯಕ್ಷರ ಆಯ್ಕೆ, ಕನ್ನಡ ಸಾಹಿತ್ಯ ಸಮ್ಮೇಳನದ ಸ್ವರೂಪ ಗೋಷ್ಟಿಗಳು, ಪುಸ್ತಕ ಮಳಿಗೆ, ಊಟೋಪಚಾರ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿ ಅನುದಾನವು ಜಿಲ್ಲಾಧಿಕಾರಿಗಳಿಗೆ ಬಿಡುಗಡೆಯಾಗಲಿದ್ದು, ಹಣಕಾಸಿನ ಸಂಪೂರ್ಣ ಜವಾಬ್ದಾರಿ ಜಿಲ್ಲಾಡಳಿತದ ಮೇಲಿರುತ್ತದೆ. ಸಾಹಿತ್ಯ ಪರಿಷತ್ ಸಂಪೂರ್ಣ ಸಹಕಾರ ನೀಡಿ ಸಮ್ಮೇಳನದ ಯಶಸ್ಸಿಗೆ ಶ್ರಮಿಸಲಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕೆ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಶಾಸಕರಾದ ನರೇಂದ್ರ ಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ರವಿಕುಮಾರ್, ಉದಯ್ ಗೌಡ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯತಿ ಸಿಇಒ ಶೇಖ್ ತನ್ವೀರ್ ಆಸಿಫ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು ಹಾಗೂ ಹಲವು ಅಧಿಕಾರಿಗಳು ಸಭೆಯಲ್ಲಿ ಇದ್ದರು.
