ಸಿಬ್ಬಂದಿಗಳ ಜೀವ ಅಮೂಲ್ಯವಾದದ್ದು. ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
ಅಪಘಾತದಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವನ ಹೇಳಿ, ನಿಗಮದ ವಿವಿಧ ಪರಿಹಾರ ಯೋಜನೆ ಅಡಿ ಸಿಬ್ಬಂದಿ ಹಾಗೂ ಸಿಬ್ಬಂದಿಗಳ ಅವಲಂಬಿತರಿಗೆ ಪರಿಹಾರ ಮೊತ್ತದ ಚೆಕ್ ವಿತರಿಸಿ ಮಾತನಾಡಿದರು.
“ಸಾರಿಗೆ ಸಿಬ್ಬಂದಿಗಳು ಹಗಲು, ಇರಳು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿದೆ. ಮೃತ ಸಿಬ್ಬಂದಿಗಳ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ಈಗಾಗಲೇ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಲಾಗಿದೆ” ಎಂದು ತಿಳಿಸಿದರು.

“ಇಂದು ವಿತರಿಸಲಾಗಿರುವ ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮಕ್ಕಳ ವಿದ್ಯಾಬ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭಕಾರ್ಯಗಳಿಗೆ ಸದುಪಯೋಗ ಮಾಡಿಕೊಳ್ಳಬೇಕು. ಬಡ್ಡಿ ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡಬಾರದು. ಹಣವಿದ್ದರೆ ಎಲ್ಲರೂ ನೆಂಟರೆ, ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

“ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ ʼಕೆಎಸ್‌ಆರ್‌ಟಿಸಿ ಆರೋಗ್ಯʼ ಯೋಜನೆಯನ್ನೂ ಕೂಡ ಜಾರಿಗೆ ತಂದಿದ್ದು, ರಾಜ್ಯಾದ್ಯಂತ 300ಕ್ಕೂ ಅಧಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದೆ. ಈವರೆಗೂ 56,000ಕ್ಕೂ ಅಧಿಕ ಸಿಬ್ಬಂದಿ/ಅವಲಂಬಿತರು ಚಿಕಿತ್ಸೆ ಪಡೆದಿದ್ದಾರೆ” ಎಂದು ತಿಳಿಸಿದರು.
ಇದೇ ಪ್ರಪ್ರಥಮ ಬಾರಿಗೆ ನಿಗಮದ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತಕ್ಕೆ ಒಳಪಟ್ಟು, ಬಲಗಾಲಿನ ಮಂಡಿಯ ಕೆಳಗೆ ಕಾಲನ್ನು ಕಳೆದುಕೊಂಡ ಹಾಸನ ವಿಭಾಗ ಅರಕಲಗೂಡು ಘಟಕದ ಬಿಲ್ಲೆ ಸಂಖ್ಯೆ. 1624, ಚಾಲಕ-ಕಂ-ನಿರ್ವಾಹಕ ಸುನಿಲ್ ಕುಮಾರ್ ಬಿ ಡಿ ಅವರಿಗೆ ₹25 ಲಕ್ಷ ಪರಿಹಾರ ವಿತರಿಸಲಾಗಿದೆ. ಅಲ್ಲದೆ ಅವರಿಗೆ 2024ರ ಮಾರ್ಚ್ 25ರಿಂದ ಡಿಸೆಂಬರ್ 09ರವರೆಗೆ 08 ತಿಂಗಳು 14 ದಿನಗಳ ಅವಧಿಗೆ ಐಒಡಿ ನೀಡಲಾಗಿದೆ.

ಸಂಸ್ಥೆಯಿಂದ ₹4,85,762ರಷ್ಟು ಪೂರ್ಣ ವೈದ್ಯಕೀಯ ವೆಚ್ಚ ಭರಿಸಲಾಗಿದೆ. ಸದರಿ ನೌಕರರಿಗೆ ಲಘು ಹುದ್ದೆ ನೀಡಿ ತಾಂತ್ರಿಕ ಸಹಾಯಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಲಾಗಿದೆ. ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ₹1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈವರೆಗೂ 24 ಮಂದಿ ನೌಕರರ ಕುಟುಂಬದವರಿಗೆ ತಲಾ ₹1 ಕೋಟಿ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಇಂದು, ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ತಲಾ ₹1 ಕೋಟಿ ಚೆಕ್ ನೀಡಲಾಗಿದ್ದು, ಈವರೆಗೂ 26 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟಾರೆ ₹26 ಕೋಟಿ ಪರಿಹಾರ ನೀಡಲಾಗಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ:
ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ₹3 ಲಕ್ಷವಿದ್ದ ಪರಿಹಾರದ ಮೊತ್ತವನ್ನು 2023ರ ನವೆಂಬರ್ 01ರಿಂದ ₹10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈವರೆಗೂ 94 ಪ್ರಕರಣಗಳಲ್ಲಿ ತಲಾ ₹10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು, ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 31 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ಇಂದು ತಲಾ ₹10 ಲಕ್ಷಗಳ ಪರಿಹಾರದ ಚೆಕ್ ವಿತರಿಸಲಾಗಿದೆ. ಈವರೆಗೂ 125 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟು ₹12.50 ಕೋಟಿ ಪರಿಹಾರ ನೀಡಲಾಗಿದೆ. ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ₹25 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರಾರಸಾ ನಿಗಮ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ನೇತೃತ್ವದಲ್ಲಿ, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ಇಂದು ತಲಾ ₹1 ಕೋಟಿಯಂತೆ ಇಬ್ಬರಿಗೆ ₹2 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ(31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ₹10 ಲಕ್ಷದಂತೆ) ₹3.10 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ.

ಕರಾರಸಾ ನಿಗಮ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ವಿ ಮಾತನಾಡಿ, “ಸಾರಿಗೆ ಮತ್ತು ಮುಜರಾಯಿ ಸಚಿವರು ಹೇಳಿರುವ ಕಿವಿ ಮಾತನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಹಾರದ ಹಣವನ್ನು ಸದುಪಯೋಗಪಡಿಸಿಕೊಳ್ಳಿ ಯಾರನ್ನೂ ನಂಬಿ ದುಡ್ಡನ್ನು ಕಳೆದುಕೊಳ್ಳಬೇಡಿ. ಸಂಸ್ಥೆ ಸದಾ ತಮ್ಮೊಡನೆ ಇದೆ. ಕರಾರಸಾ ನಿಗಮ ಸಚಿವರು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮಾರ್ಗದರ್ಶನದಂತೆ, ನಿಗಮದಲ್ಲಿ ಹತ್ತು- ಹಲವು ಕಾರ್ಮಿಕ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಮನರೇಗಾ ಯೋಜನೆಯ ಸಮರ್ಪಕ ಜಾರಿಗೆ ಕೆಪಿಆರ್‌ಎಸ್ ಆಗ್ರಹ
ವ್ಯವಸ್ಥಾಪಕ ನಿರ್ದೇಶಕ ಆರ್ ರಾಮಚಂದ್ರನ್, ಬಿಎಂಟಿಸಿ ನಿರ್ದೇಶಕಿ ಡಾ. ನಂದಿನಿದೇವಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.