ಕೆಎಸ್‌ಆರ್‌ಟಿಸಿ ಬಸ್ – ಆ್ಯಕ್ಟಿವಾ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಸಮೀಪದ ಎನ್ ಸಿ ರೋಡ್ ಬಳಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಆ್ಯಕ್ಟಿವಾ ವಾಹನದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ಯುವಕನನ್ನು ಉಳ್ತೂರು ಸಮೀಪದ ಮಂಗಳತೇರು ನಿವಾಸಿ ರಾಜೇಶ್ ಎಂದು ಗುರುತಿಸಲಾಗಿದೆ.
ಬಿ.ಸಿ. ರೋಡ್ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ KA 70 J 3273 ರಿಜಿಸ್ಟ್ರೇಷನ್ ಹೊಂದಿದ್ದ ಬೈಕ್ ಸವಾರ, ಎದುರಿಗಿದ್ದ ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೆಳ್ತಂಗಡಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಸೂಪರ್ ಫಾಸ್ಟ್ ಕೆಎಸ್‌ಆರ್‌ಟಿಸಿ ಬಸ್ ಮುಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಇದನ್ನು ಓದಿದ್ದೀರಾ? 2024ನೇ ಸಾಲಿನ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ
ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


