ಬೇಸಿಗೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿರುವ ಗ್ರಾಮಗಳನ್ನು ಗುರುತಿಸಲಾಗಿದ್ದು, ಆ ಗ್ರಾಮಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾರ್ಯನಿರ್ವಹಣೆಯನ್ನು ಸಮಗ್ರವಾಗಿ ಪರಿಶೀಲಿಸಿ, ಯಾವುದೇ ತೊಂದರೆಗಳಿದ್ದಲ್ಲಿ ತಕ್ಷಣವೇ ಸರಿಪಡಿಸಿಕೊಳ್ಳಬೇಕು. ಖಾಸಗಿ ಬೋರ್‌ವೆಲ್‌ಗಳ ಪಟ್ಟಿ ತಯಾರಿಸಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕಾದ ಗ್ರಾಮಗಳನ್ನು ಗುರುತಿಸಿ ಸೂಕ್ತ ಯೋಜನೆ ರೂಪಿಸಬೇಕು ಎಂದು ಹೇಳಿದರು.
ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಅಥವಾ ಇತರ ಅಡಚಣೆಗಳಿದ್ದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಜನರ ಮೂಲಭೂತ ಅಗತ್ಯವಾದ ಕುಡಿಯುವ ನೀರಿನ ಸಮಸ್ಯೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಒತ್ತಿಹೇಳಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್ ನಿರ್ಮಾಣ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ
ಸ್ಮಶಾನಕ್ಕೆ ಜಾಗ ಒದಗಿಸುವುದು, ಹಕ್ಕುಪತ್ರ ವಿತರಣೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಮನವಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದರು.
ಈ ಸುದ್ದಿ ಓದಿದ್ದೀರಾ? ಯುವಜನರಿಗಾಗಿ ಭಾಷಣ–ಪ್ರಬಂಧ ಸ್ಪರ್ಧೆ: ಏಪ್ರಿಲ್ 20ರಂದು ಮೈಸೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯಿಂದ ಆಯೋಜನೆ
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.





