ಬೆಳಗಾವಿ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಸಿಬ್ಬಂದಿ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸೇರಿದಂತೆ ಮೂವರು ಆರೋಪಿಗಳ ಮೇಲೆ ಎಫ್‌ಐಆರ್ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ನಡುವೆಯೇ ಮೂವರು ಆರೋಪಿಗಳಾದ ತಹಶೀಲ್ದಾರ್ ಬಸವರಾಜ ನಾಗರಾಳ, ಅಶೋಕ ಕಬ್ಬಲಿಗೇರ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು ದೊಡವಾಡಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇವರಿಗೆ ಜಿಲ್ಲಾ ನ್ಯಾಯಾಧೀಶ ಶಿರೋಳ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದರು.
ನಿರೀಕ್ಷಣಾ ಜಾಮೀನು ಮಂಜೂರಾಗುತ್ತಿದ್ದಂತೆ ಕಳೆದ ಒಂಭತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಮತ್ತು ಎ1 ಆರೋಪಿ ತಹಶೀಲ್ದಾರ್ ಬಸವರಾಜ ನಾಗರಾಳ ಶುಕ್ರವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಎಸ್‌ಡಿಎ ಸಿಬ್ಬಂದಿ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡ ಛೇಂಬರಿನಲ್ಲಿಯೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಪ್ರಕರಣದ ಕುರಿತು ತಹಶೀಲ್ದಾರ್ ಬಸವರಾಜ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಏನಿದು ಪ್ರಕರಣ?
ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಆಗಿದ್ದ ರುದ್ರಣ್ಣ ಯಡವನ್ನವರ ನವೆಂಬರ್ 5ರಂದು ತಹಶೀಲ್ದಾರ್ ಕೊಠಡಿಯಲ್ಲೇ ನೇಣಿಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ, ತಮ್ಮ ಸಾವಿಗೆ ತಹಶೀಲ್ದಾರ್ ಬಸವರಾಜ ನಾಗರಾಳ, ಅಶೋಕ ಕಬ್ಬಲಿಗೇರ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು ದೊಡವಾಡಿ ಕಾರಣ ಮೂವರು ಹೊಣೆ ಎಂದು ಅವರ ಹೆಸರನ್ನು ವಾಟ್ಸ್‌ಆ್ಯಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದರು. ತದನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದರು.
