ಗಾಂಧಿ ಭಾರತ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವುದು ಖಾತ್ರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಗಾಂಧಿ ಭಾರತ ಕಾರ್ಯಕ್ರಮದ ಪ್ರಯುಕ್ತ ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಶೀರ್ಷಿಕೆಯಡಿ ಬೆಳಗಾವಿ ನಗರದಲ್ಲಿ ಜನವರಿ 21ರಂದು ನಡೆಯುವ ಕಾಂಗ್ರೆಸ್ ಅಧಿವೇಶನದಲ್ಲಿ 2 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವರು” ಎಂದು ತಿಳಿಸಿದರು.
“ಈ ಕಾರ್ಯುಕ್ರಮ ಮೊದಲೇ ನಿಗದಿಯಾಗಿತ್ತು. ಆದರೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಕಾರಣ ಮುಂದೂಡಲಾಗಿತ್ತು. ಅಂದು ಬೆಳಿಗ್ಗೆ ಸುವರ್ಣ ಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸುತ್ತೇವೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತವಾಗಿ ಎಲ್ಲ ನಾಯಕರೂ ಭಾಗವಹಿಸುವರು” ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಎಸ್‌ಸಿ, ಎಸ್‌ಟಿ ಕಾಲೋನಿಗಳಿಗೆ ಸರಳ ಖಾತಾ ಆಂದೋಲನ ಸಭೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸಭೆ ಬಹಿಷ್ಕಾರ
“ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ, ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಸಭೆ ನಡೆಸುವರು. ಗಾಂಧಿ ಭಾರತ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸುವರು. ಶನಿವಾರ ಬೇರೆ ಜಿಲ್ಲೆಗಳಿಗೆ ತೆರಳುವರು” ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ