ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದ್ದು, ನಾಳೆ(ಅಕ್ಟೋಬರ್ 25) ಶಿಕ್ಷೆ ಪ್ರಮಾಣವನ್ಬು ಪ್ರಕಟಿಸಲಿದೆ. ಇಂದು ಕೂಡ ಶಿಕ್ಷೆಯ ಪ್ರಮಾಣಕ್ಕೆ ಸಂಬಂಧಿಸಿದಂತೆ ವಾದಿ – ಪ್ರತಿವಾದಿ ವಕೀಲರಿಂದ ವಾದವನ್ನು ಆಲಿಸಿದ ನ್ಯಾಯಾಧೀಶರು ಶಿಕ್ಷೆಯನ್ನು ನಾಳೆ ಪ್ರಕಟಿಸುವುದಾಗಿ ವಿಚಾರಣೆಯನ್ನು ಮುಂದೂಡಿದರು.
ಇಂದು ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್.ಹೇಮಾ ಅವರು, 3100 ಮೆಟ್ರಿಕ್ ಟನ್ ಅದಿರು ಕಳ್ಳಸಾಗಣಿಕೆ ಮಾಡಿದ್ದಾರೆ. ಹೀಗಾಗಿ ಆರೋಪಿಗಳಿಗೆ ಜೈಲು ಶಿಕ್ಷೆಯ ಜೊತೆಗೆ ಗರಿಷ್ಠ ದಂಡ ವಿಧಿಸುವಂತೆ ಮನವಿ ಮಾಡಿದರು.
ಸತೀಶ್ ಸೈಲ್ ಪರ ವಕೀಲ ಮೂರ್ತಿ ಡಿ ನಾಯ್ಕ್ ಅವರು, ಶಾಸಕ ಸತೀಶ್ ಸೈಲ್ ಅವರಿಗೆ ಅನಾರೋಗ್ಯ ಇದೆ. ಸದ್ಯ ಸತೀಶ್ ಸೈಲ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಾರೋಗ್ಯ ಕಾರಣದಿಂದ ಜಾಮೀನು ಕೂಡ ಪಡೆದಿದ್ದರು. ಹೀಗಾಗಿ ಕನಿಷ್ಠ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದರು. ಇದಲ್ಲದೇ ಸತೀಶ್ ಸೈಲ್ ಆರೋಗ್ಯಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು.
ಮುಟ್ಟುಗೋಲು ಮಾಡಿಕೊಳ್ಳಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಪರಾಧಿಗಳಾದ ಮಹೇಶ್ ಬಿಳಿಯೆ, ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ಅಕ್ಟೋಬರ್ 24 ರಂದು ತೀರ್ಪು ನೀಡಿತ್ತು.
ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳಲ್ಲಿ ಅಂತಿಮ ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೆಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು.
ವಾದ ಪ್ರತಿವಾದ ಆಲಿಸಿರುವ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅಂತಿಮ ಆದೇಶವನ್ನು ಅ.25ಕ್ಕೆ ಹೊರಡಿಸಲಿದ್ದಾರೆ. ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ ಸೇರಿ ಹಲವರ ವಿರುದ್ಧ ಆರೋಪ ಸಾಬೀತಾಗಿದೆ. ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳಿಯೆ, ಶಾಸಕ ಸತೀಶ್ ಸೇರಿ ಎಲ್ಲ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.
