ಡಿ.4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವವರಿಗೆ ವಸತಿ, ಊಟ, ಸಾರಿಗೆ ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯ ಒದಗಿಸಬೇಕು. ಯಾವುದೇ ರೀತಿಯ ಅನಾನುಕೂಲವಾಗದಂತೆ ಎಚ್ಚರ ವಹಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಅಧಿವೇಶನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ (ನ.30) ನಡೆದ ಸಭೆಯಲ್ಲಿ ಅಧಿಕಾರಿಗಳು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ‘ಡಿ.4ರಿಂದ ಅಧಿವೇಶನ ಆರಂಭಗೊಳ್ಳಲಿದೆ. ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ಒಂದು ದಿನ ಮುಂಚಿತವಾಗಿಯೇ ಆಗಮಿಸಿ ಸಿದ್ಧತೆ ಪರಿಶೀಲಿಸಲಿದ್ದಾರೆ. ಪ್ರತಿವರ್ಷದಂತೆ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಚಿವರು ಮತ್ತು ಶಾಸಕರಿಗೆ ಊಟದ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.
‘ಅಧಿಕಾರಿಗಳು, ಮಾರ್ಷಲ್‌ಗಳು ಹಾಗೂ ಪತ್ರಕರ್ತರಿಗೆ ಸೌಧದ ನೆಲಮಹಡಿಯಲ್ಲಿ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಲಾಗುವುದು. ವಾಹನ ಚಾಲಕರು, ಅಧಿವೇಶನ ಕರ್ತವ್ಯಕ್ಕೆ ನಿಯೋಜನೆಗೊಂಡ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿಧಾನಸೌಧದ ಹೊರಗೆ ಊಟದ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾವತಿ ಆಧಾರದಲ್ಲಿ ಕ್ಯಾಂಟೀನ್ ಮತ್ತು ಉಪಾಹಾರ ಮಳಿಗೆ ಆರಂಭಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಸಮಿತಿ ಮುಂಚಿತವಾಗಿ ಪರಿಶೀಲಿಸಿ, ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು’ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ್ ದುಡಗುಂಟಿ, ಗೀತಾ ಕೌಲಗಿ, ರಾಜಶ್ರೀ ಜೈನಾಪುರ, ಮಲ್ಲಿಕಾರ್ಜುನ ಕಲಾದಗಿ, ಶ್ರೀಶೈಲ ಕಂಕಣವಾಡಿ ಇತರರಿದ್ದರು.