ಧಾರಾಕಾರ ಮಳೆಯಿಂದ ಅಪಾರ ಹಾನಿಗೊಳಗಾದ ವ್ಯಾಪಾರಸ್ಥರು, ಅಂಗಡಿಕಾರರು ಹಾಗೂ ಮನೆ ಕಳೆದುಕೊಂಡ ಸಂತ್ರಸ್ತರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮಂಗಳವಾರ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರಸಭೆಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂತ್ರಸ್ತರು ಮತ್ತು ವ್ಯಾಪಾರಸ್ಥರು ಭಾಗವಹಿಸಿ, ಮಳೆ ಹಾನಿಯಿಂದ ಉಂಟಾದ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು. ಅಂಗಡಿಗಳನ್ನು ಸ್ವಯಂ ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.




