ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸುಜಿತ್ ಮುಳಗುಂದ ಅವರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸುಪ್ರಿಂ ಕೋರ್ಟ್ ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿದೆ.
ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಶಾಸಕ ಅಭಯ್ ಪಾಟೀಲ್ ವಿರುದ್ಧ 2012ರಲ್ಲಿ ಬೆಳಗಾವಿ ಲೋಕಾಯುಕ್ತಕ್ಕೆ ದೂರು ನೀಡಿದ್ದೆ. ತನಿಖೆ ನಿಧಾನಗತಿಯಲ್ಲಿದ್ದು, ಈ ಬಗ್ಗೆ ಕರ್ನಾಟಕ ಲೋಕಾಯುಕ್ತರ ಗಮನ ಸೆಳೆಯಬೇಕಾಗಿತ್ತು. ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕರ್ನಾಟಕ ಲೋಕಾಯುಕ್ತರು ಆದೇಶಿಸಿದ್ದರು. ಆದರೆ ಇದು ಯಾವುದೇ ಫಲಿತಾಂಶವನ್ನು ನೀಡಲಿಲ್ಲ” ಎಂದು ಹೇಳಿದ್ದಾರೆ.
“ಕರ್ನಾಟಕ ಹೈಕೋಟ್‌ನಲ್ಲಿ ಪ್ರಕರಣ ದಾಖಲಿಸಬೇಕಾಯಿತು. ಆದರೆ ಪ್ರಕರಣ ದಾಖಲಾದ ವ್ಯವಸ್ಥೆ ಸೂಕ್ತವಲ್ಲ ಎಂಬ ಕಾರಣ ನೀಡಿ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿದೆ. ಆದ್ದರಿಂದ ನಾನು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇನೆ” ಎಂದು ಸುಜಿತ್ ಹೇಳಿದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗೋಮಾಳ ಜಮೀನು ವಿವಾದ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ
“ನನ್ನ ಹೋರಾಟ ಭ್ರಷ್ಟಾಚಾರದ ವಿರುದ್ಧವೇ ಹೊರತು ಯಾವುದೇ ವ್ಯಕ್ತಿಯ ವಿರುದ್ಧವಲ್ಲ” ಎಂದು ಸುಜಿತ್ ಸ್ಪಷ್ಟಪಡಿಸಿದ್ದು, ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಸುತ್ತಿದೆ” ಎಂದು ಹೇಳಿದರು.