ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ ಈ ಭಾಗಕ್ಕೆ ಸಿಗಬೇಕಾದ ಆದ್ಯತೆ ದೊರೆಯದಿರುವುದನ್ನು ಗಮನಿಸಿದರೆ ಪ್ರತ್ಯೇಕ ರಾಜ್ಯದ ಬೇಡಿಕೆ ತಪ್ಪೇನಲ್ಲ ಎಂಬ ಭಾವನೆ ಮೂಡುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಉತ್ತರ ಕರ್ನಾಟಕದ ಅಭಿವೃದ್ಧಿ ಅಸಮತೋಲನ ಹಾಗೂ ಪ್ರತ್ಯೇಕ ರಾಜ್ಯದ ಬೇಡಿಕೆ ಕುರಿತು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಶಕಗಳಿಂದ ನಿರೀಕ್ಷಿತ ವೇಗ ಸಿಗದಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬರುತ್ತಿರುವ ಸುಳಿವನ್ನು ಅವರು ನೀಡಿದ್ದಾರೆ.
ಮಾಜಿ ಸಚಿವ ಉಮೇಶ ಕತ್ತಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯಾಗಬೇಕು, ತಾವು ಅದರ ಮುಖ್ಯಮಂತ್ರಿಯಾಗಬೇಕು ಎಂದು ಹೇಳುತ್ತಿದ್ದ ಮಾತುಗಳನ್ನು ಸ್ಮರಿಸಿದ ಬಾಲಚಂದ್ರ ಜಾರಕಿಹೊಳಿ, ಇಂದಿನ ಪರಿಸ್ಥಿತಿಯನ್ನು ನೋಡಿದರೆ ಉಮೇಶ ಕತ್ತಿ ಅವರ ದೂರದೃಷ್ಟಿಯ ಮಾತುಗಳು ಸರಿಯಾಗಿದ್ದವು ಎನಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಈಗಲೇ ಪ್ರತ್ಯೇಕ ರಾಜ್ಯ ರಚನೆಯಾಗದಿದ್ದರೂ ಮುಂದಿನ ಹತ್ತು ವರ್ಷಗಳಲ್ಲಿ ಅಂತಹ ಸಾಧ್ಯತೆ ಇದೆ. ಒಂದು ವೇಳೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಬೆಳಗಾವಿಯನ್ನು ರಾಜಧಾನಿಯನ್ನಾಗಿ ಮಾಡುವ ಪ್ರಸ್ತಾಪಕ್ಕೆ ತಮ್ಮ ಬೆಂಬಲ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದರು.




