ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ ಆಯೋಜಿಸಲಾಗುತ್ತಿರುವ 6ನೇ ರಾಜ್ಯಮಟ್ಟದ ವಿಜ್ಞಾನ ಸಮ್ಮೇಳನಕ್ಕೆ ಸಿದ್ಧತೆಗಳು ಆರಂಭವಾಗಿವೆ.
ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನದಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.ಸಮ್ಮೇಳನದ ಯಶಸ್ವಿ ಆಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಿದರು.
ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳನ್ನು ಸಮ್ಮೇಳನಕ್ಕೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ನಗರ ವ್ಯಾಪ್ತಿಯ ವಿವಿಧ ವಸತಿ ಶಾಲೆಗಳ ವಿದ್ಯಾರ್ಥಿಗಳೂ ಸಮ್ಮೇಳನದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸಂಬಂಧಿಸಿದ ಇಲಾಖೆಗಳು ಜವಾಬ್ದಾರಿ ವಹಿಸಬೇಕು ಎಂದು ಸೂಚಿಸಿದರು.
ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ವಿವಿಧ ವಿಷಯಗಳ ಕುರಿತು ಗೋಷ್ಠಿಗಳು ಜರುಗಲಿವೆ. ವಿಜ್ಞಾನ ಕ್ಷೇತ್ರದ ವಿಚಾರಗಳು, ಜ್ಞಾನ ವಿನಿಮಯ ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಸಮ್ಮೇಳನ ಮಹತ್ವದ ವೇದಿಕೆಯಾಗಲಿದೆ.ಸಮ್ಮೇಳನದ ವ್ಯವಸ್ಥಿತ ನಿರ್ವಹಣೆಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗುವುದು. ಪ್ರತಿಯೊಂದು ಜವಾಬ್ದಾರಿಯ ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಸಿದ್ಧತೆಗಳ ಮೇಲೆ ನಿಗಾ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ತಿಳಿಸಿದರು.
ಸಭೆಯಲ್ಲಿ ಶಾಸಕ ಆಸೀಫ್ ಸೇಠ್, ಪೊಲೀಸ್ ಆಯುಕ್ತ ಪ್ರಕಾಶ ನಿಕ್ಕಂ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




