ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರ ಪ್ರದೇಶ ಸೇರಿದಂತೆ ತಾಲೂಕಿನಾದ್ಯಂತ ಸೋಮವಾರ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನಾದ್ಯಂತ ಅಂದಾಜು 65 ಮಿ.ಮೀ. ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಮನೆಗಳಿಗೆ ಮತ್ತು ವ್ಯಾಪಾರ ಮಳಿಗೆಗಳಿಗೆ ಹಾನಿಯಾಗಿದೆ ಎಂದು ತಹಶೀಲ್ದಾರ್ ಸದಾಶಿವ ಮಕ್ಕೋಜಿ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಳೆಯಿಂದಾಗಿ ಒಟ್ಟು 15 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಅಲ್ಲದೆ 45ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ನಿವಾಸಿಗಳು ತೊಂದರೆ ಅನುಭವಿಸಿದ್ದಾರೆ. ಅಧಿಕಾರಿಗಳು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸಮಗ್ರ ವರದಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ.
ಹಾನಿಗೊಳಗಾದ ಮನೆಗಳ ಮಾಲೀಕರಿಗೆ ಸರ್ಕಾರದ ನಿಯಮಾನುಸಾರ ಪರಿಹಾರ ಒದಗಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ನಗರದಲ್ಲಿನ ಕೆಲವು ವ್ಯಾಪಾರ ಮಳಿಗೆಗಳಿಗೂ ಮಳೆ ನೀರು ನುಗ್ಗಿದ್ದು, ಸರಕುಗಳು ಹಾಗೂ ಯಂತ್ರೋಪಕರಣಗಳಿಗೆ ಹಾನಿಯಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ವ್ಯಾಪಾರ ಮಳಿಗೆಗಳಿಗೆ ಉಂಟಾದ ಹಾನಿಯ ಪ್ರಮಾಣವನ್ನು ಪರಿಶೀಲಿಸಿ ಸರ್ಕಾರದ ಗಮನಕ್ಕೆ ತರಲಾಗುವುದು. ಸಂಪೂರ್ಣ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸದಾಶಿವ ಮಕ್ಕೋಜಿ ಹೇಳಿದ್ದಾರೆ.




