ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದು, 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊನ್ನಿಹಳ್ಳಿ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ನಿಪ್ಪಾಣಿ ಕಡೆಯಿಂದ ಸಂಕೇಶ್ವರದತ್ತ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದು, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಾಯಾಳುಗಳನ್ನು ಸಂಕೇಶ್ವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡವರಲ್ಲಿ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಸ್ಥಳಾಂತರಿಸಲಾಗಿದೆ.



