ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವೈದ್ಯರನ್ನು ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಎಂದು ಗುರುತಿಸಲಾಗಿದೆ. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸಿ ಬಳಿಕ ಬೆಳಗಾವಿಯಲ್ಲಿ ನೆಲೆಸಿದ್ದರು. ಸಮಾಜದಲ್ಲಿ ಸರಳ ಹಾಗೂ ಸ್ನೇಹಪರ ವ್ಯಕ್ತಿತ್ವದಿಂದ ಪರಿಚಿತರಾಗಿದ್ದ ಅವರು ವೈದ್ಯ ವಲಯದಲ್ಲಿಯೂ ಗೌರವ ಪಡೆದಿದ್ದರು.
ಡಾ. ಭಟ್ಕಳ ಅವರು ತಮ್ಮ ಮನೆಯ ಬಾಲ್ಕನಿಯಲ್ಲಿ ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಅವರು ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದೇ ಕಾರಣದಿಂದ ಈ ಕೃತ್ಯ ಎಸಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಟಿಳಕವಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





