ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸುಮಾರು 18 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ಮುಂಜಾನೆ ಏಕಕಾಲದಲ್ಲಿ ಶೋಧ ನಡೆಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಸಚಿವರ ನಿವಾಸ, ಸರ್ಕಾರಿ ವಸತಿ ಗೃಹಗಳು ಸೇರಿದಂತೆ ಬೆಳಗಾವಿ ಹಾಗೂ ಗೋಕಾಕ್‌ನಲ್ಲಿರುವ ವಿವಿಧ ಆಸ್ತಿಗಳಲ್ಲೂ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಾರ್ ಲೈಸೆನ್ಸ್‌ಗಳ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಸೇರಿದಂತೆ ವಿವಿಧ ವಿಚಾರಗಳ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಈ ಶೋಧ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ಸಚಿವರ ಬಾಮೈದ ಹಾಗೂ ಅಬಕಾರಿ ಇಲಾಖೆಯ ಜಂಟಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ED ದಾಳಿ ನಡೆಸಿತ್ತು. ಅದರ ಬೆನ್ನಲ್ಲೇ ಇದೀಗ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲೂ ಶೋಧ ನಡೆದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಚಿವರ ಪುತ್ರಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳು ಮತ್ತು ಕುಟುಂಬಕ್ಕೆ ಸಂಬಂಧಿಸಿದ ಇತರ ಸ್ಥಳಗಳಲ್ಲಿಯೂ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದಲ್ಲಿರುವ ಕೆಲವು ಸ್ಥಳಗಳಲ್ಲೂ ED ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ಸಚಿವರ ಆಪ್ತ ಮೂಲಗಳು ಹೇಳಿವೆ. ಶೋಧದ ವೇಳೆ ಯಾವುದೇ ಮಹತ್ವದ ದಾಖಲೆಗಳು ಅಥವಾ ವಸ್ತುಗಳು ಪತ್ತೆಯಾಗಿವೆಯೇ ಎಂಬುದರ ಕುರಿತು EDಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.




