ಬೆಳಗಾವಿ ನಗರದ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಪ್ರಯಾಣಿಕರಿಗಾಗಿ ನಿರ್ಮಿಸಿರುವ ಶೌಚಗೃಹಗಳಲ್ಲಿ ಸ್ವಚ್ಛತೆ ಇಲ್ಲದಿರುವುದು ಹಾಗೂ ದರಪಟ್ಟಿ ಪ್ರದರ್ಶಿಸದಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು.
ನಿಲ್ದಾಣದಲ್ಲಿರುವ ಉಪಾಹಾರ ಗೃಹಗಳಿಗೆ ಭೇಟಿ ನೀಡಿದ ಅವರು, ಸ್ವಚ್ಛತೆ ಕಾಪಾಡದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಆಹಾರ ಸುರಕ್ಷತಾ ಅಧಿಕಾರಿಗಳು ಉಪಾಹಾರ ಗೃಹಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸದಿರುವುದಕ್ಕೆ ತರಾಟೆಗೆ ತೆಗೆದುಕೊಂಡರು.
ಬಳಿಕ ವಿವಿಧ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಅವಧಿ ಮೀರಿದ ಆಹಾರ ಸಾಮಗ್ರಿಗಳು ಪತ್ತೆಯಾಗಿವೆ. ಅವುಗಳನ್ನು ವಶಕ್ಕೆ ಪಡೆದು, ಸಂಬಂಧಿಸಿದ ಅಂಗಡಿಕಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.



