ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶ್ರೀ ವೀರಭದ್ರೇಶ್ವರ ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ರೈತ ಸಂಘಟನೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು.
ದಿನಾಂಕ 25ರಂದು ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು, ಅದರ ಹಿನ್ನೆಲೆ ಸಾಲಹಳ್ಳಿ, ಉದಪುಡಿ, ಗುಡಗಮನಾಳ, ಬುದ್ನಿ, ತೊಂಡಿಕಟ್ಟಿ, ತಿಮ್ಮಾಪೂರ, ಹೊಸಕೋಟಿ, ಬಿಡಕಿ, ರೊಕ್ಕದಕಟ್ಟಿ, ಪಂಚಗಾಂವ, ಹಾಗೂ ಕುಳ್ಳೂರು ಗ್ರಾಮಗಳಲ್ಲಿ ರೈತ ಸಂಘಟನೆಯ ಮುಖಂಡರು ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ರೈತ ಸಂಘಟನೆಯ ಮುಖಂಡರಾದ ಜಗದೀಶ ದೇವರಡ್ಡಿ, ಮಾರುತಿ ಕೊಪ್ಪದ ಹಾಗೂ ಬಿ.ಎಸ್. ನಾಯ್ಕ, ಹಲವು ವರ್ಷಗಳಿಂದ ವಿಳಂಬವಾಗುತ್ತಿರುವ ಶ್ರೀ ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ ರೈತರಿಗೆ ನೀರಿನ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು .
ಇದೇ ವೇಳೆ ದಿನಾಂಕ 25ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸುವಂತೆ ರೈತರಿಗೆ ಮನವಿ ಮಾಡಿದರು.
ಸಭೆಯಲ್ಲಿ ವಿವಿಧ ಗ್ರಾಮಗಳ ರೈತರು, ಗ್ರಾಮಸ್ಥರು ಹಾಗೂ ರೈತ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.



