ರಾಜ್ಯದಲ್ಲಿ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರೈತ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಸತ್ಯಪ್ಪ ಮಾತನಾಡಿ, ರಾಜ್ಯ ಸರ್ಕಾರ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಕಂಪನಿಗಳಿಗೆ ವಹಿಸಲು ಮುಂದಾಗಿರುವುದು ರೈತರು, ಕಾರ್ಮಿಕರು ಹಾಗೂ ವಿದ್ಯುತ್ ಗ್ರಾಹಕರಲ್ಲಿ ತೀವ್ರ ಆತಂಕ ಉಂಟುಮಾಡಿದೆ ಎಂದು ಹೇಳಿದರು.
ವಿದ್ಯುತ್ ಜನಸಾಮಾನ್ಯರ ಮೂಲಭೂತ ಅಗತ್ಯ ಸೇವೆಯಾಗಿದ್ದು, ಅದನ್ನು ಖಾಸಗಿ ಸಂಸ್ಥೆಗಳ ನಿಯಂತ್ರಣಕ್ಕೆ ನೀಡುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಖಾಸಗೀಕರಣದಿಂದ ಗ್ರಾಮೀಣ ಪ್ರದೇಶದ ರೈತರಿಗೆ ನೀಡಲಾಗುತ್ತಿರುವ ಸಬ್ಸಿಡಿ ಹಾಗೂ ವಿವಿಧ ಸೌಲಭ್ಯಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ. ಅಲ್ಲದೇ ಹೆಸ್ಕಾಂ, ಬೆಸ್ಕಾಂ ಸೇರಿದಂತೆ ರಾಜ್ಯದ ವಿವಿಧ ವಿದ್ಯುತ್ ವಿತರಣಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಹಾಗೂ ಗುತ್ತಿಗೆ ಕಾರ್ಮಿಕರ ಉದ್ಯೋಗ ಭದ್ರತೆಯ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಬಹುದು ಎಂದು ಹೇಳಿದರು.
ಆದ್ದರಿಂದ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಪ್ರಕ್ರಿಯೆಯನ್ನು ಮುಂದುವರಿಸದೆ, ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಹೇಳಿದರು.
ತಾಲೂಕು ಅಧ್ಯಕ್ಷ ಜಗದೀಶ ದೇವರಡ್ಡಿ, ಶಿವಾನಂದ ದೊಡ್ಡವಾಡ ಹಾಗೂ ರೈತ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.



