ಜೈ ಕಿಸಾನ್ ತರಕಾರಿ ಮಾರುಕಟ್ಟೆ ಓಪನ್ ಮಾಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ರೈತರ ಹಾಗೂ ವರ್ತಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಧ್ಯಾಹ್ನ 12.30ರಿಂದ ಸಂಜೆ 6 ಗಂಟೆಯವರೆಗೆ ರೈತರು ಹಾಗೂ ವರ್ತಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕರಿಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಪ್ರಮೋದ್ ಎಂಬುವವರು ಖಡೇ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ.
ಪ್ರತಿಭಟನೆಯ ಸಮಯದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ಗಳು, ಶಾಲಾ–ಕಾಲೇಜು ಮಕ್ಕಳು ಹಾಗೂ ನಾಗರಿಕರು ತೊಂದರೆ ಅನುಭವಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ, “ಚೆನ್ನಮ್ಮ ವೃತ್ತದಲ್ಲಿ 15 ನಿಮಿಷಕ್ಕಿಂತ ಹೆಚ್ಚು ಪ್ರತಿಭಟನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ವಿಡಿಯೋ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.