ಗಂಡು ಮಗು ಹುಟ್ಟಿದ ಸಂಭ್ರಮದಲ್ಲಿ ಪಾರ್ಟಿ ನೀಡುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದಲ್ಲಿ ಮೊಹರಂ ಹಬ್ಬದಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೊಹರಂ ಹಬ್ಬದ ಸಂಭ್ರಮದ ವೇಳೆ ಗ್ರಾಮದ ಕಟ್ಟೆ ಮೇಲೆ ಮದ್ಯ ಸೇವಿಸುತ್ತಿದ್ದ ವಿಶ್ವನಾಥ ಹಾಗೂ ಹಣಮಂತ ನಡುವೆ ಗಂಡು ಮಗು ಹುಟ್ಟಿದ ಹಿನ್ನೆಲೆಯಲ್ಲಿ ಪಾರ್ಟಿ ನೀಡುವ ವಿಚಾರವಾಗಿ ವಾಗ್ವಾದ ನಡೆದಿದೆ. ಮಾತಿನ ಚಕಮಕಿ ಕ್ಷಣಾರ್ಧದಲ್ಲೇ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.
ಈ ವೇಳೆ ಕೋಪಗೊಂಡ ವಿಶ್ವನಾಥ ಸಮೀಪದಲ್ಲಿದ್ದ ಕಲ್ಲನ್ನು ಎತ್ತಿಕೊಂಡು ಹಣಮಂತನ ತಲೆಗೆ ಬಲವಾಗಿ ಹೊಡೆದಿದ್ದಾನೆ. ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವ ಉಂಟಾದ ಪರಿಣಾಮ ಹಣಮಂತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಸುದ್ದ ಓದಿದ್ದಿರಾ? ಬೆಳಗಾವಿ | ಕಾರಿನ ಲೋನ್ ಕಟ್ಟಲು ಮನೆಗಳಲ್ಲೇ ಕಳ್ಳತನ: ಇಬ್ಬರು ಖದೀಮರ ಬಂಧನ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನೇಸರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿಯಾದ ವಿಶ್ವನಾಥನನ್ನು ಬಂಧಿಸಿದ್ದು, ನೇಸರಗಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




