ಮುಂಗಾರು ಹಂಗಾಮು ಸಮೀಪಿಸುತ್ತಿರುವ ಹಿನ್ನೆಲೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆ ಹಾಗೂ ಭೂತಾಯಿ ರಕ್ಷಣೆ ಕಣ್ಣಾವಲು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
“ಕಳೆದ ಬಾರಿ ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ತೊಂದರೆ ಎದುರಾಗಿರಲಿಲ್ಲ. ಈ ಬಾರಿಯೂ ಯಾವುದೇ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಸಗೊಬ್ಬರ ಬಳಕೆಯನ್ನು ನಿಯಂತ್ರಿಸುವ ಅಗತ್ಯವನ್ನೂ ಅವರು ಒತ್ತಿಹೇಳಿದರು. “ಹಿಂದಿನ ಹಂಗಾಮಿನಲ್ಲಿ ರಸಗೊಬ್ಬರ ಬಳಕೆ ಪ್ರಮಾಣ ಕಡಿಮೆಯಾಗಿತ್ತು. ಇದೇ ಪ್ರವೃತ್ತಿ ಮುಂದುವರಿಯಬೇಕು. ಅಧಿಕಾರಿಗಳು ಹಾಗೂ ಪೂರೈಕೆದಾರರು ರೈತರೊಂದಿಗೆ ಸಮನ್ವಯ ಸಾಧಿಸಿ ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು. ಅತಿಯಾದ ಬಳಕೆಯಿಂದ ಮಣ್ಣಿನ ಆರೋಗ್ಯ ಹಾನಿಯಾಗುತ್ತದೆ ಎಂಬುದರ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕು” ಎಂದು ತಿಳಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ. ಕೋಳಕರ ಮಾತನಾಡಿ, “ಜಿಲ್ಲಾಮಟ್ಟದಲ್ಲಿ 10 ಹಿರಿಯ ಅಧಿಕಾರಿಗಳನ್ನು ಒಳಗೊಂಡ ರಸಗೊಬ್ಬರ ಮೇಲ್ವಿಚಾರಣೆ ಕೋಶವನ್ನು ರಚಿಸಲಾಗಿದೆ” ಎಂದು ಹೇಳಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




