ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ವಿದ್ಯುತ್ ತಗುಲಿ 9 ವರ್ಷದ ಬಾಲಕಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಸಾನ್ವಿ ಕಾಂಬಳೆ ಎಂದು ಗುರುತಿಸಲಾಗಿದೆ.
ಸಂಜೆ ವೇಳೆ ಮನೆಯ ಮೇಲ್ಪಾವಣಿಯಲ್ಲಿ ಆಟವಾಡುತ್ತಿದ್ದಾಗ, ಮೇಲಿದ್ದ ವಿದ್ಯುತ್ ತಂತಿಯ ಮೇಲೆ ಸ್ಕಿಪ್ಪಿಂಗ್ ಹಗ್ಗ ಬಿದ್ದಿದೆ. ಹಗ್ಗವನ್ನು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಬಾಲಕಿಗೆ ವಿದ್ಯುತ್ ತಗುಲಿದ್ದು, ಆಘಾತದಿಂದ ಸಮತೋಲನ ತಪ್ಪಿ ಮೇಲಿಂದ ಕೆಳಗೆ ಬಿದ್ದಿದ್ದಾಳೆ.
ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಸಾನ್ವಿ ಇಂಗಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.



