ಬೆಳಗಾವಿ ಜಿಲ್ಲೆಯ ಖಾನಾಪುರ ಜಾಂಬೋಟಿ ರಸ್ತೆಯ ಶನಯಾ ಗಾರ್ಡನ್ ಸಮೀಪ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದ ಪರಿಣಾಮ, ಆರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳು ಕಾರ್ಲಗಟ್ಟಾ ಗ್ರಾಮದ ನಿವಾಸಿಗಳಾಗಿದ್ದು, ಅಂಬೋಲಿಗೆ ಅಂತ್ಯಕ್ರಿಯೆಯೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಪಂಡಿತ್ ಓಗಲೆ ಗಾಯಾಳುಗಳ ನೆರವಿಗೆ ಧಾವಿಸಿ, ತಮ್ಮ ಸ್ವಂತ ವಾಹನಗಳಲ್ಲೇ ಖಾನಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಸಮಯಪ್ರಜ್ಞೆ ಮತ್ತು ಮಾನವೀಯತೆ ಮೆರೆದರು.
ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




