ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ರೈತರನ್ನು ಬೆಳಗಾವಿ ನಗರದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿಯಾಗಿ ಮಾತುಕತೆ ನಡೆಸಿದರು. ರೈತರ ಬೇಡಿಕೆಗಳು ನ್ಯಾಯಯುತವಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಸರ್ಕಾರದಿಂದ ಒಳ್ಳೆಯ ಸುದ್ದಿ ಬರಲಿದೆ ಎಂದು ಭರವಸೆ ನೀಡಿದರು.
ರೈತರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ರೈತರು ಮತ್ತು ಕಬ್ಬು ಬೆಳೆಗಾರರ ಪರವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿವೆ ಎಂಬುದನ್ನು ತಿಳಿಸಲು ಇಲ್ಲಿಗೆ ಬಂದಿದ್ದೇನೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳ, ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಸಂಪೂರ್ಣ ಖರೀದಿ ಹಾಗೂ ಸಕ್ಕರೆಯ ವಾಣಿಜ್ಯ ದರ ಹೆಚ್ಚಳ ರೈತರ ಪ್ರಮುಖ ಬೇಡಿಕೆಗಳಾಗಿವೆ. ಈ ಕುರಿತು ರಾಜ್ಯ ಸರ್ಕಾರ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ತಿಳಿಸಲಾಗಿದೆ ಎಂದರು.



