ಜನರು ಸರ್ಕಾರವನ್ನು ಹುಡುಕುವ ಪರಿಸ್ಥಿತಿ ಇರಬಾರದು. ಸರ್ಕಾರವೇ ಜನರ ಮನೆಬಾಗಿಲಿಗೆ ತಲುಪಬೇಕು. ಜಿಲ್ಲಾಧಿಕಾರಿಗಳಿಂದ ಗ್ರಾಮ ಲೆಕ್ಕಾಧಿಕಾರಿವರೆಗೆ ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಕಾರ್ಯನಿರ್ವಹಿಸುತ್ತಿರುವುದನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಜನರನ್ನು ಕಚೇರಿಗಳಿಗೆ ಅಲೆದಾಡಿಸುವ ಪದ್ಧತಿ ನಿಲ್ಲಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಘನತೆಯಿಂದ ಸೇವೆ ಸಲ್ಲಿಸಬೇಕು ಎಂದು ಅವರು ಹೇಳಿದರು.
ಪ್ರಜಾಸೇವಾ ಇಲಾಖೆ ಆರಂಭ
ಜನರ ಅಹವಾಲುಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ಪ್ರತ್ಯೇಕ ಪ್ರಜಾಸೇವಾ ಇಲಾಖೆ ಆರಂಭಿಸಲಾಗಿದ್ದು, ಅದಕ್ಕೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಆಯ್ದ ತಾಲ್ಲೂಕುಗಳಲ್ಲಿ ಜನಸಂಪರ್ಕ ಸಭೆ ನಡೆಸಿ ಅರ್ಜಿಗಳನ್ನು ಸ್ವೀಕರಿಸಿ, ಕಾನೂನು ಚೌಕಟ್ಟಿನೊಳಗೆ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸೂಚಿಸಿದರು.
₹8 ಸಾವಿರ ಕೋಟಿ ವೆಚ್ಚದಲ್ಲಿ 2 ಸಾವಿರ ಶಾಲೆಗಳು
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸಿಎಸ್‌ಆರ್ ನಿಧಿಯಲ್ಲಿ ₹8 ಸಾವಿರ ಕೋಟಿ ವೆಚ್ಚದಲ್ಲಿ ಮೂರು ಗ್ರಾಮ ಪಂಚಾಯಿತಿಗಳಿಗೆ ಒಂದು ಸರ್ಕಾರಿ ಶಾಲೆಯಂತೆ ಒಟ್ಟು 2 ಸಾವಿರ ಶಾಲೆಗಳನ್ನು ನಿರ್ಮಿಸಲಾಗುವುದು ಎಂದು ಶಿವಕುಮಾರ್ ಹೇಳಿದರು. ಪ್ರತಿ ಶಾಲೆಗೆ ₹15 ಕೋಟಿ ವೆಚ್ಚವಾಗಲಿದ್ದು, ಜಿಲ್ಲೆಯ ಪ್ರಮುಖ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ವ್ಯವಸ್ಥೆಯನ್ನೂ ರೂಪಿಸಲಾಗುವುದು ಎಂದರು.
ಮತದಾರರ ಹಕ್ಕು ರಕ್ಷಣೆಗೆ ಸೂಚನೆ
ಪ್ರತಿ ಅರ್ಹ ವ್ಯಕ್ತಿಗೂ ಮತದಾನದ ಹಕ್ಕು ದೊರೆಯುವಂತೆ ನೋಡಿಕೊಳ್ಳಬೇಕು. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
‘ಭಾರತ್ ಜೋಡೋ ಯುವಕ ಸಂಘ’ ಸ್ಥಾಪನೆ
ದೇಶದ ಐಕ್ಯತೆ ಮತ್ತು ಸಮಗ್ರತೆ ಬಲಪಡಿಸುವ ಉದ್ದೇಶದಿಂದ ರಾಜ್ಯದಲ್ಲಿ 10 ಸಾವಿರ ‘ಭಾರತ್ ಜೋಡೋ ಯುವಕ ಸಂಘ’ಗಳನ್ನು ಸ್ಥಾಪಿಸಿ, ಪ್ರತಿ ಗ್ರಾಮ ಪಂಚಾಯಿತಿಗೆ ₹10 ಲಕ್ಷ ನೆರವು ನೀಡಲಾಗುವುದು ಎಂದು ಘೋಷಿಸಿದರು. ಯೋಜನೆಗೆ ₹1 ಸಾವಿರ ಕೋಟಿ ಮೀಸಲಿಡಲಾಗಿದ್ದು, ಪ್ರತಿ ಕ್ಷೇತ್ರದಲ್ಲಿ ಬಡವರಿಗೆ 5 ಸಾವಿರದಿಂದ 10 ಸಾವಿರ ನಿವೇಶನಗಳನ್ನು ನೀಡಲು ಹಾಗೂ ಪ್ರತಿ ತಾಲ್ಲೂಕಿನಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಹೇಳಿದರು.
ಬರ ಪರಿಸ್ಥಿತಿಗೆ ಸಿದ್ಧರಾಗಿರಿ: ಪರಮೇಶ್ವರ್
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಶೇ.17ರಷ್ಟು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಟಾಸ್ಕ್‌ಫೋರ್ಸ್‌ಗಳು ನಿಯಮಿತ ಸಭೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿನ ಕೊರತೆಯಾಗದಂತೆ ಟ್ಯಾಂಕರ್ ಮೂಲಕ ನೀರು ಪೂರೈಸುವುದು, ಮೇವಿನ ಕಿಟ್ ವಿತರಿಸುವುದು ಹಾಗೂ ಮಳೆ ಮಾಪನ ಕೇಂದ್ರಗಳನ್ನು ಆಧುನೀಕರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೇಂದ್ರ ಸರ್ಕಾರ ಉಳಿದ ರಸಗೊಬ್ಬರವನ್ನು ಶೀಘ್ರ ಪೂರೈಸುವಂತೆ ಮನವಿ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಮನೆ-ಮನೆಗೆ ತೆರಳಿ ಹಕ್ಕುಪತ್ರ ವಿತರಣೆ ಹಾಗೂ 140 ಕೋಟಿ ಪುಟಗಳ ಭೂ ದಾಖಲೆಗಳ ಡಿಜಿಟಲೀಕರಣ ಕಾರ್ಯ ನಡೆಯುತ್ತಿದ್ದು, ಇದು ದೇಶಕ್ಕೇ ಮಾದರಿಯಾಗಲಿದೆ ಎಂದು ಹೇಳಿದರು.
ಸಭೆಯಲ್ಲಿ ವಿಧಾನಸಭೆಯ ಹಂಗಾಮಿ ಅಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಎಂ.ಬಿ. ಪಾಟೀಲ, ಸತೀಶ ಜಾರಕಿಹೊಳಿ, ಯು.ಟಿ. ಖಾದರ್, ಈಶ್ವರ ಖಂಡ್ರೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಉಪಸ್ಥಿತರಿದ್ದರು.



