ಬೆಳಗಾವಿ ಜಿಲ್ಲೆಯ ರಾಮದುರ್ಗ ಷಟ್ಟಣದಲ್ಲಿ ಬಸವಣ್ಣನವರ ಜಯಂತಿಯನ್ನು ಏಪ್ರಿಲ್ 20 ಹಾಗೂ 21ರಂದು ಅದ್ದೂರಿಯಾಗಿ ಆಚರಿಸಲು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಏಪ್ರಿಲ್ 20ರಂದು ಬೆಳಿಗ್ಗೆ 8 ಗಂಟೆಗೆ ಪಟ್ಟಣದ ವಿರಕ್ತಮಠದಲ್ಲಿ ಷಟಸ್ಥಲ ಧ್ವಜಾರೋಹಣ ನೆರವೇರಲಿದೆ. ಬಳಿಕ ಹುಬ್ಬಳ್ಳಿ ರಸ್ತೆಯಲ್ಲಿರುವ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡಲಾಗುವುದು. ಬೆಳಿಗ್ಗೆ 10 ಗಂಟೆಗೆ ವಿದ್ಯಾಚೇತನ ಶಾಲಾ ಆವರಣದ ಗುರುಭವನದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರ ಅಧ್ಯಕ್ಷತೆಯಲ್ಲಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಮಹಾಲಿಂಗಪುರದ ಡಾ. ಅಶೋಕ ನರೋಡೆ ಅವರನ್ನು ಅತಿಥಿ ಉಪನ್ಯಾಸಕರಾಗಿ ಆಹ್ವಾನಿಸುವ ಜವಾಬ್ದಾರಿಯನ್ನು ಜಾಗತಿಕ ಲಿಂಗಾಯತ ಮಹಾಸಭೆಗೆ ವಹಿಸಲಾಗಿದೆ.
ಏಪ್ರಿಲ್ 21ರಂದು ಸಂಜೆ 4 ಗಂಟೆಗೆ ಭವ್ಯ ಮೆರವಣಿಗೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ, ಬಿಇಒ ಸುರೇಂದ್ರ ಕಾಂಬಳೆ, ಜಾಗತಿಕ ಲಿಂಗಾಯತ ಮಹಾಸಭೆಯ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ವಿ. ನಾಡಗೌಡ್ರ, ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




