ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಹಾಗೂ ನಗದು ಹಣ ಸುಟ್ಟು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಸಂಭವಿಸಿದೆ.
ಅಂಬೇಡ್ಕರ್ ನಗರದ ಮಾರುತಿ ಕೋಟೆ ಹಾಗೂ ಶ್ರವಣ ಕೋಟೆ ಅವರಿಗೆ ಸೇರಿದ ಮನೆಯಲ್ಲಿ ಏಕಾಏಕಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ಮನೆಯಾದ್ಯಂತ ವ್ಯಾಪಿಸಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಮೂರು ಟ್ರೆಜರಿಗಳು, ಫ್ರಿಡ್ಜ್, ಸೋಫಾ ಸೆಟ್ ಸೇರಿದಂತೆ ಹಲವು ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮನೆಯ ಮೇಲ್ಪಾವಣಿಗೂ ಬೆಂಕಿ ವ್ಯಾಪಿಸಿದ್ದು, ಮನೆಯಲ್ಲಿದ್ದ ನಗದು ಹಣವೂ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.
ಈ ಅಗ್ನಿ ದುರಂತದಿಂದ ಸುಮಾರು 10ರಿಂದ 15 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಕಷ್ಟಪಟ್ಟು ದುಡಿದು ನಿರ್ಮಿಸಿಕೊಂಡಿದ್ದ ಮನೆ ಹಾಗೂ ಸಂಗ್ರಹಿಸಿಟ್ಟಿದ್ದ ವಸ್ತುಗಳು ಕಣ್ಣೆದುರೇ ಸುಟ್ಟುಹೋಗಿದ್ದರಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಬೆಂಕಿ ಅವಘಡ ಮತ್ತಷ್ಟು ಆಘಾತ ನೀಡಿದೆ. ಮನೆ ಹಾಗೂ ಮನೆಯಲ್ಲಿದ್ದ ವಸ್ತುಗಳನ್ನು ಕಳೆದುಕೊಂಡ ಕುಟುಂಬಕ್ಕೆ ನೆರವಿನ ಅಗತ್ಯವಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಸಮಗ್ರ ಪರಿಶೀಲನೆ ನಡೆಸಬೇಕು. ಸರ್ಕಾರ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ ನೆರವಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.




