ವಕೀಲ ಸಂತೋಷ ಪಾಟೀಲ ಹತ್ಯೆ ಮಾಡಿದ ಹಾಗೂ ಗೋಕಾಕದ ವಕೀಲ ಸಿ.ಬಿ. ಗಿಡ್ಡನವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು’ ಎಂದು ಆಗ್ರಹಿಸಿ ಬೆಳಗಾವಿ ನಗರದಲ್ಲಿ ಗುರುವಾರ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ರಾಣಿ ಚನ್ನಮ್ಮ ವೃತ್ತದಲ್ಲಿ ಕೆಲ ಕಾಲ ಧರಣಿ ಮಾಡಿದ ವಕೀಲರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಇದರಿಂದಾಗಿಯೇ ಅಪರಾಧ ಸಂಖ್ಯೆಗಳು ಹೆಚ್ಚುತ್ತಿವೆ. ನ್ಯಾಯಕ್ಕಾಗಿ ಹೋರಾಡುವ ವಕೀಲರ ಮೇಲೆಯೇ ಪದೇಪದೇ ಹಲ್ಲೆಗಳು ನಡೆಯುತ್ತಿವೆ. ಈಗಾಗಲೇ ಕೆಲವರು ಹತ್ಯೆ ನಡೆದಿದೆ. ಆದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ವಕೀಲರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಿಸಲು ಕಠಿಣ ಕಾನೂನು ರೂಪಿಸಬೇಕು. ಈ ಬಗ್ಗೆ ಹಲವು ವರ್ಷಗಳಿಂದ ಆಗ್ರಹ ಮಾಡುತ್ತಿದ್ದರೂ ನಿರ್ಲಕ್ಷ್ಯ ಮಾಡಲಾಗಿದೆ’ ಎಂದು ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಎಸ್. ಕಿವಡಸಣ್ಣನವರ ಕಿಡಿ ಕಾರಿದರು.
‘ಯುವ ವಕೀಲ ಸಂತೋಷ ಪಾಟೀಲ ಅವರನ್ನು ಕೋರ್ಟ್ ಆವರಣದಿಂದಲೇ ಅಪಹರಣ ಮಾಡಿಕೊಂಡು ಹೋಗಿ ಹತ್ಯೆ ಮಾಡಲಾಗಿದೆ. ಇದಕ್ಕೆ ಸಾಕಷ್ಟು ಸಾಕ್ಷಿಗಳೂ ಸಿಕ್ಕಿವೆ. ಈ ಘಟನೆಯಿಂದ ವಕೀಲರಲ್ಲಿ ಆತಂಕದ ವಾತಾವರಣ ಉಂಟಾಗಿದೆ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.