ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಪಟ್ಟಣದ ಹೊರವಲಯದ ಜಮೀನುಗಳ ವ್ಯಾಪ್ತಿಯಲ್ಲಿ ಚಿರತೆ ಓಡಾಡುತ್ತಿರುವುದನ್ನು ಸೋಮವಾರ ಕೆಲ ರೈತರು ಗಮನಿಸಿ ಖಚಿತಪಡಿಸಿದ್ದಾರೆ. ಸ್ಥಳದಲ್ಲಿ ಪತ್ತೆಯಾದ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಅವು ಚಿರತೆಯ ಹೆಜ್ಜೆ ಗುರುತುಗಳೇ ಎಂದು ದೃಢಪಡಿಸಿದ್ದಾರೆ.
ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸೋಮವಾರವೇ ಸ್ಥಳದಲ್ಲಿ ಬೋನು ಅಳವಡಿಸಿ ಸೆರೆಹಿಡಿಯುವ ಕಾರ್ಯಾಚರಣೆ ಆರಂಭಿಸಿದೆ. ರಾತ್ರಿ ವೇಳೆಯಲ್ಲೂ ಸಿಬ್ಬಂದಿ ಪಟ್ಟಣದ ಹೊರವಲಯ ಹಾಗೂ ಜಮೀನುಗಳ ಸುತ್ತಮುತ್ತ ತೀವ್ರ ಶೋಧ ನಡೆಸುತ್ತಿದ್ದಾರೆ.
ಚಿರತೆ ಸೆರೆ ಸಿಗುವವರೆಗೆ ರೈತರು ಹಾಗೂ ಗ್ರಾಮಸ್ಥರು ರಾತ್ರಿ ವೇಳೆ ಜಮೀನುಗಳಿಗೆ ತೆರಳುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಅರಣ್ಯ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.



